×
Ad

ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ: ದಿನಕರ ಬಾಬು

Update: 2021-02-12 21:06 IST

ಉಡುಪಿ, ಫೆ.12: ಕ್ರೀಡೆ ಮನುಷ್ಯನಿಗೆ ಸ್ಪೂರ್ತಿ ನೀಡುತ್ತದೆ. ಇದನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಂಡು ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಶುಕ್ರವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಯಾವುದಾದರು ಒಂದು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೆ ವ್ಯಕ್ತಿಯ ದೇಹದ ಮತ್ತು ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುವುದರ ಜೊತೆಗೆ, ತಮ್ಮ ಕೆಲಸ ಕಾರ್ಯಗಳನ್ನು ಉತ್ಸಾಹದಾಯಕವಾಗಿ ನಿರ್ವಹಿಸಬಹುದು. ಒತ್ತಡದಲ್ಲಿ ಕೆಲಸ ಮಾಡುವ ನೌಕರರು ಅಪರೂಪದ ಇಂತಹ ಕ್ರೀಡಾವಕಾಶಗಳನ್ನು ಬಳಸಿಕೊಳ್ಳಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ ಭಟ್ ವೈ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಹೆಚ್ ಉದಯ್‌ಕುಮಾರ ಶೆಟ್ಟಿ, ಕೋಶಾಧಿಕಾರಿ ರೋಣಾ ಶರೀಫ್, ಹೆಬ್ರಿ ತಾಲೂಕು ಅಧ್ಯಕ್ಷ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಸ್ವಾಗತಿಸಿದರು, ಕಿರಣ್ ಹೆಗ್ಡೆ ವಂದಿಸಿದರು, ಪ್ರಶಾಂತ್‌ ಶೆಟ್ಟಿ ಹಾವಂಜೆ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News