ಬಿಪಿಎಲ್ ಕಾರ್ಡ್‌ನಲ್ಲಿ ಸುಳ್ಳು ಮಾಹಿತಿ ನೀಡಿದರೆ ಕಠಿಣ ಕ್ರಮ: ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಫೆ.16: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವರು ಸುಳ್ಳು ಮಾಹಿತಿ ನೀಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಅನರ್ಹರರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ಸ್ವಯಂಪ್ರೇರಿತವಾಗಿ ಸಂಬಂಧಪಟ್ಟ ಕಚೇರಿಗೆ ಹಿಂದಿರುಗಿಸಿ, ಎಪಿಎಲ್ ಪಡಿತರ ಚೀಟಿಯನ್ನು ಇದೇ ಫೆಬ್ರವರಿ ಅಂತ್ಯದೊಳಗೆ ಪಡೆಯಬೇಕು. ತಪ್ಪಿದ್ದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದು ದುರ್ಲಾಭ ಪಡೆಯುತ್ತಿರುವ ಪಡಿತರ ಚೀಟಿಯನ್ನು ಅನರ್ಹಗೊಳಿಸಿ ದಂಡ ವಸೂಲಿ ಮಾಡುವುದರ ಜೊತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸರಕಾರಿ ನೌಕರರು/ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲ ಖಾಸಗಿ ನೌಕರರು/ ಸರಕಾರಿ ಅನುದಾನಿತ ನೌಕರರು/ ನಿಗಮ/ ಮಂಡಳಿಗಳು/ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ ಜಿಎಸ್‌ಟಿ/ ವೃತ್ತಿತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೆರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ವಾಣಿಜ್ಯ ವಾಹನ (ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ) ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ನಿವೃತ್ತ ನೌಕರರು ಹಾಗೂ ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿ ಒಟ್ಟಿಗೆ ವಾಸಿಸುತ್ತಿದ್ದರೂ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದಿರುವವರಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.