ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಫೆ.22ರಂದು ಕಾಂಗ್ರೆಸ್ ಸೇರ್ಪಡೆ

Update: 2021-02-17 13:37 GMT

ಬೆಂಗಳೂರು, ಫೆ.17: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಫೆ.22ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರತ್ ಕುಮಾರ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಂಬಂಧಿಸಿದಂತೆ ಈಗಾಗಲೆ ಶರತ್ ಕುಮಾರ್ ಬಚ್ಚೇಗೌಡ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಹೈಕಮಾಂಡ್ ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆಗೆ ಹಸಿರು ನಿಶಾನೆ ತೋರಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಶರತ್ ಬಚ್ಚೇಗೌಡ, ತಮ್ಮ ಕುಟುಂಬದ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ವಿರುದ್ಧ ಸೆಣಸಾಡಲು ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ.

ಉಪ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ, ಎಂಟಿಬಿ ನಾಗರಾಜ್‍ಗೆ ಟಿಕೆಟ್ ಕೊಡಿಸಿದರು. ಇದರಿಂದ ಬೇಸತ್ತು ಬಿಜೆಪಿಗೆ ಶರತ್ ಬಚ್ಚೇಗೌಡ ರಾಜೀನಾಮೆ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ಗೆಲುವಿನ ನಗೆ ಬೀರಿದ್ದರು.

ವಿಧಾನಸಭೆಯ ಉಪ ಚುನಾವಣೆಯಲ್ಲಿ ಪರಾಭವಗೊಂಡಿದ್ದರೂ ಎಂಟಿಬಿ ನಾಗರಾಜ್‍ರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆಮಾಡಿ, ಸಚಿವ ಸಂಪುಟಕ್ಕೂ ಯಡಿಯೂರಪ್ಪ ಸೇರ್ಪಡೆ ಮಾಡಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ವಿರುದ್ಧ ರಾಜಕೀಯವಾಗಿ ಹೋರಾಡಲು ಅವರು ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News