×
Ad

ಸುರಕ್ಷತಾ ಸಂಚಾರಕ್ಕೆ ಅಗತ್ಯ ಮುಂಜಾಗೃತಾ ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2021-02-17 21:37 IST

ಮಂಗಳೂರು, ಫೆ.17: ಸಾರ್ವಜನಿಕರ ಸುಗಮ ಹಾಗೂ ಸುರಕ್ಷತಾ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅಧಿಕಾರಿಗಳಿಗೆ ಸೂಚನೆ ನೀಡಿದರು.

ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವುದರ ಜೊತೆಗೆ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಜನರ ಸುರಕ್ಷಿತ ಸುಖಕರ ಪ್ರಯಾಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯವಿರುವ ಎಲ್ಲಾ ಅಭಿವೃದ್ಧಿಗಳನ್ನು ಕೈಗೊಳ್ಳುವುದರೊಂದಿಗೆ ಜನಸಾಮಾನ್ಯರು ರಸ್ತೆ ಸುರಕ್ಷತಾ ಹಾಗೂ ಸಂಚಾರ ನಿಯಮಗಳನ್ನು ಚಾಚು ತಪ್ಪದೆ ಪಾಲಿಸುವಂತೆ ನೋಡಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ಐದು ವರ್ಷಗಳಲ್ಲಿ ಹೆಚ್ಚು ಅಪಘಾತವಾಗಿರುವ ಸ್ಥಳಗಳನ್ನು ಗುರುತಿಸುವುದರೊಂದಿಗೆ ಅಲ್ಲಿ ಅಪಘಾತಗಳು ಮರುಕಳಿಸದಂತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಜನಸಾಮಾನ್ಯರಿಗೆ ತಿಳಿಯುವಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅತೀ ಹೆಚ್ಚು ಅಪಘಾತಗಳ ಪ್ರಕರಣಗಳು ಕಂಡುಬರುತ್ತಿದ್ದು, ಗ್ರಾಮೀಣ ಭಾಗದ 10 ಹಾಗೂ ನಗರ ಪ್ರದೇಶದ 10 ಸ್ಥಳಗಳನ್ನು ಗುರುತಿಸುವುದರೊಂದಿಗೆ ಆ ಸ್ಥಳಗಳಲ್ಲಿ ಏನೆಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡು ಅಪಘಾತವಾಗುವುದನ್ನು ತಡೆಗಟ್ಟಲು ಸಾಧ್ಯವೋ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿ ಕ್ರಮ ವಹಿಸಬೇಕು ಎಂದು ಡಿಸಿ ರಾಜೇಂದ್ರ ಕೆ.ವಿ.ಹೇಳಿದರು.

ರಸ್ತೆ ಸುರಕ್ಷತಾ ಸಮಿತಿ ಸಭೆಯು ಪ್ರತಿ ತಿಂಗಳಿಗೊಮ್ಮೆ ನಡೆಯಬೇಕು. ಸಮಿತಿಯಲ್ಲಿ ಚರ್ಚಿಸಿದ ನಿರ್ಣಯಗಳನ್ನು ಚಾಚುತಪ್ಪದೆ ಪಾಲಿಸಬೇಕು ಎಂದ ಅವರು, ಇಂದಿನ ಸಮಿತಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು, ಮುಂದಿನ ದಿನಗಳಲ್ಲಿ ಇಂತಹವು ಪುನರಾವರ್ತಿತವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಾಕಿ, ಅವರನ್ನೇ ವೈಯಕ್ತಿಕ ಜವಾಬ್ದಾರಿಯನ್ನಾಗಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಎಸ್ಪಿ ಲಕ್ಷ್ಮಿಪ್ರಸಾದ್, ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವರ್ಣೇಕರ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News