ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ಶೀಘ್ರದಲ್ಲೆ ತೀರ್ಮಾನ: ಸಿಎಂ ಯಡಿಯೂರಪ್ಪ

Update: 2021-02-18 12:52 GMT

ಬೆಂಗಳೂರು, ಫೆ. 18: ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡ(ಎಸ್ಟಿ) ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಳ ಮಾಡುವ ಸಂಬಂಧ ಕಾನೂನು ತಜ್ಞರ ಜತೆ ಚರ್ಚೆ ನಡೆಸಿ ಶೀಘ್ರದಲ್ಲೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಮುದಾಯದ ಸಚಿವರು, ಶಾಸಕರಿಗೆ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕರಾದ ರಾಜುಗೌಡ, ರಾಮಚಂದ್ರ, ಸಂಸದರು ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ನಮ್ಮ ಬೇಡಿಕೆಗೆ ಸ್ಪಂದನೆ: ‘ಕಾನೂನು ತಜ್ಞರ ಜೊತೆ ಚರ್ಚಿಸಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ ಎಂದು ಶಾಸಕ ರಾಜುಗೌಡ ತಿಳಿಸಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಸಂಬಂಧ ಚರ್ಚಿಸಿದ್ದೇವೆ. ನಮ್ಮ ಬೇಡಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿರುವ ಎಸ್ಟಿ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ನಮ್ಮ ಮನವಿಗೆ ಸಿಎಂ ಸ್ಪಂದಿಸಿರುವುದು ಆಶಾದಾಯಕ ಬೆಳವಣಿಗೆ ಎಂದ ಅವರು, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಸಮುದಾಯಕ್ಕೆ ನ್ಯಾಯಬದ್ಧವಾದ ಮೀಸಲಾತಿ ಸೌಲಭ್ಯ ಸಿಗಬೇಕು. ರಾಜ್ಯದಲ್ಲಿರುವ ಎಸ್ಸಿ-ಎಸ್ಟಿ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದೇವೆ. ಶೋಷಿತ ಸಮುದಾಯಗಳಿಗೆ ಸರಕಾರ ಅವಕಾಶಗಳನ್ನು ಕಲ್ಪಿಸಬೇಕು. ಮೀಸಲಾತಿಗಾಗಿ ಮೊದಲಿಗೆ ಹೋರಾಟ ಆರಂಭಿಸಿದ್ದೇ ಪರಿಶಿಷ್ಟ ಪಂಗಡದವರು ಎಂದು ಹೇಳಿದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಮೀಸಲಾತಿ ಸೌಲಭ್ಯ ಸಿಗಬೇಕು. ಪಡೆದವರು ಪದೇ ಪದೇ ಮೀಸಲಾತಿ ಪಡೆಯುವುದು, ಜನಪ್ರತಿನಿಧಿಗಳ ಮಕ್ಕಳು, ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಆರ್ಥಿಕವಾಗಿ ಸುಸ್ಥಿತಿಯಲ್ಲಿರುವವರಿಗಿಂತ ಹಿಂದುಳಿದ ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯ ಸಿಗಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News