ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Update: 2021-02-21 12:13 GMT

ಬೆಂಗಳೂರು, ಫೆ. 21: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ‘2ಎ ಮೀಸಲಾತಿ ಘೋಷಣೆಗೆ ಆಗ್ರಹಿಸಿ ಸಮುದಾಯದ ಜನರು ವಿಧಾನಸೌಧ ಮುತ್ತಿಗೆ ಹಾಕಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ರವಿವಾರ ಬೆಳಗ್ಗೆ 6ರಿಂದ ಫೆ.22ರ ಮಧ್ಯರಾತ್ರಿ 12 ಗಂಟೆಯ ವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು, ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಭವನ, ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳಿವೆ. ಈ ಸಮಯದಲ್ಲಿ ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಹಾಗೂ ಸರಕಾರದ ಆಸ್ತಿಪಾಸ್ತಿಗಳಿಗೆ ನಷ್ಟವನ್ನುಂಟು ಮಾಡುವ ಸಾಧ್ಯತೆಗಳಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುನ್ನಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಾಗೂ ಸರಕಾರಿ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದು, ಯಾವುದೇ ಶಸ್ತ್ರಗಳು, ದೊಣ್ಣೆಗಳು ಮತ್ತಿತರ ವಸ್ತುಗಳನ್ನು ಕೊಂಡೊಯ್ಯುವುದು, ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಕಮಲ್ ಪಂತ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News