ವಸತಿ ಶಾಲೆಗಳು ಪ್ರಾರಂಭವಾಗದೆ ವಿದ್ಯಾರ್ಥಿಗಳು ಅತಂತ್ರ: ರಝಾಕ್ ಉಸ್ತಾದ್

Update: 2021-02-21 17:36 GMT

ಬೆಂಗಳೂರು, ಫೆ. 21: ಒಂದರಿಂದ 5ನೇ ತರಗತಿ ಹೊರತುಪಡಿಸಿ ಎಲ್ಲ ಹಂತದ ಶಾಲೆಗಳು ನಾಳೆಯಿಂದ ಪ್ರಾರಂಭವಾಗುತ್ತಿದೆ. ಆದರೆ, ಸರಕಾರಿ ವಸತಿ ಶಾಲೆಗಳು ಪ್ರಾರಂಭವಾಗದಿರುವುದರಿಂದ ವಿದ್ಯಾರ್ಥಿಗಳು ಅತಂತ್ರ ಸ್ಥಿತಿ ಅನುಭವಿಸುತ್ತಿದ್ದಾರೆಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಝಾಕ್ ಉಸ್ತಾದ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು, ಏಕಲವ್ಯ ಮಾದರಿ ವಸತಿ ಶಾಲೆಗಳು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ 819 ವಸತಿ ಶಾಲೆಗಳಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸುಮಾರು 1,63,070 ವಿದ್ಯಾರ್ಥಿಗಳಿದ್ದಾರೆ. ಆದರೆ, ಕೋವಿಡ್ ಲಾಕ್‍ಡೌನ್‍ನಿಂದ ಬಂದ್‍ ಆಗಿದ್ದ ವಸತಿ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲವೆಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 2020-21ನೇ ಸಾಲಿಗಾಗಿ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಆದರೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಮ್ಮ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸದೇ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳ ಪಾಲಕರಿಗೆ 2020-21ನೇ ಸಾಲಿಗಾಗಿ ತರಗತಿಗಳು ನಡೆಯಲಿ ಅಥವಾ ನಡೆಯದೇ ಇರಲಿ ಮುಂದಿನ ತರಗತಿಗೆ ಪ್ರವೇಶ ಪಡೆಯಲೇಬೇಕು ಎಂದು ಸಚಿವ ಸುರೇಶ್‍ ಕುಮಾರ್ ಆದೇಶ ನೀಡಿದ್ದಾರೆ. ಇದೇ ಸಚಿವರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ಮಾಡಲು ಹಿಂದೇಟು ಹಾಕುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಯಾವಾಗ ಬೇಕಾದರೂ ಪ್ರಾರಂಭ ಮಾಡಲಿ. ಈ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಪಾಲಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News