ಗ್ರಾ.ಪಂ. ಸದಸ್ಯರು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು: ರಮಾನಾಥ ರೈ

Update: 2021-02-22 16:06 GMT

ಬಿ.ಸಿ.ರೋಡ್ : ಗ್ರಾಮ ಪಂಚಾಯತ್ ಸದಸ್ಯರಿಗೆ ಗ್ರಾಮದಲ್ಲಿ ಹಲವು ಜವಾಬ್ದಾರಿಗಳಿರುತ್ತವೆ. ಅವುಗಳನ್ನು ನಿಷ್ಠೆಯಿಂದ ನಿರ್ವಹಿಸಬೇಕು ಮತ್ತು ಯಾವುದೇ ಜಾತಿ ಮತ ಧರ್ಮಗಳ ಭೇದಗಳಿಲ್ಲದೆ ಊರಿನಲ್ಲಿ ಸಂಬಂಧವನ್ನು ಇಟ್ಟುಕೊಳ್ಳಬೇಕು. ಗ್ರಾಮದ ಅಭಿವೃದ್ಧಿಯ ಜೊತೆಗೆ ಪಕ್ಷ  ಸಂಘಟನೆಯ ಕಡೆಗೂ ಗಮನಹರಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈಯವರು ಹೇಳಿದರು. 

ಅವರು ಮಾಣಿ ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇವರ ಸಂಯುಕ್ತ ಆಶ್ರಯದಲ್ಲಿ ಮಾಣಿ ನಾರಾಯಣ ಗುರು ಮಂದಿರದಲ್ಲಿ ಜರಗಿದ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅಭಿನಂದನಾ ಸಮಾರಂಭ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾಣಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ ಇವರನ್ನು  ಅಭಿನಂದಿಸಲಾಯಿತು. 

ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮಾತನಾಡಿ, ಮಾಣಿ ಗ್ರಾಮ ಪಂಚಾಯತ್ ನಲ್ಲಿ ಅಭೂತಪೂರ್ವ ಗೆಲುವು ನಮ್ಮದಾಗಿದೆ, ಇದು ದೇವರ ಆಶೀರ್ವಾದ, ಕಠಿಣ ಹೋರಾಟ ಮತ್ತು ಜನರ ಸಹಕಾರದಿಂದ ಸಾಧ್ಯವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಜನರ ಸೇವೆಯ ಜೊತೆಗೆ ಗ್ರಾಮದ ಅಭಿವೃದ್ಧಿಯನ್ನು ಮಾಡಿ ಗ್ರಾಮಸ್ಥರೆಲ್ಲರ ಪ್ರೀತಿಯನ್ನು ಗಳಿಸುತ್ತೇವೆ ಎಂದರು. 

ಇದೇ ವೇಳೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಶರತ್ ಪೂಜಾರಿ ಗುಂಡಿ ಇವರನ್ನು ರಮಾನಾಥ ರೈ ಯವರು ಪಕ್ಷದ ಶಾಲು ತೊಡಿಸಿ ಧ್ವಜವನ್ನು ಹಸ್ತಾಂತರಿಸಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ಪೂಜಾರಿ ಬಾಕಿಲ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನೂತನ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ ಕೆ ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ ಡಿ ಪೂಜಾರಿ, ಸುಜಾತಾ, ಸೀತಾ ಹಾಗೂ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳಾದ  ನಿರಂಜನ್ ರೈ, ಅಬ್ದುಲ್ ರಝಾಕ್ ಕೊರ್ಯ, ಮಾಣಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ಕೊಡಾಜೆ, ಬೂತ್ ಸಮಿತಿ ಅಧ್ಯಕ್ಷರಾದ ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ರಶ್ಮಿ ಸ್ಟೀವನ್ ಮಾರ್ಟಿಸ್ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News