ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರಕಾರಕ್ಕೆ ಮನವಿ

Update: 2021-02-22 16:45 GMT

ಬೆಂಗಳೂರು, ಫೆ. 22: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಹೋರಾಟ ತಾರಕಕ್ಕೇರಿರುವ ಬೆನ್ನಲ್ಲೆ ರಾಜ್ಯ ಒಕ್ಕಲಿಗ ಸಮುದಾಯವೂ ಮೀಸಲಾತಿಗೆ ಬೇಡಿಕೆಯನ್ನಿಟ್ಟಿದ್ದು, ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿಯಲ್ಲಿ ಕಲ್ಪಿಸಿರುವ ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದೆ.

ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿರುವ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ, ರಾಜ್ಯದಲ್ಲಿ ಒಕ್ಕಲಿಗ ಸಮುದಾಯ ಶೇ.17ರಷ್ಟಿದೆ. ಆದರೆ, ಈ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ಕಲ್ಪಿಸಿರುವುದು ಸರಿಯಲ್ಲ. ಈ ಪ್ರಮಾಣವನ್ನು ಶೇ.10ಕ್ಕೆ ಏರಿಕೆ ಮಾಡಬೇಕು. ಇದರಿಂದ ಸಮುದಾಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದೆ.

ಇದೇ ವೇಳೆ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ, ಈ ವರ್ಷದ ಆಯವ್ಯಯದಲ್ಲಿ ಸುಮಾರು 1 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಬೇಕು. ರಾಜ್ಯದಲ್ಲಿ 95 ಲಕ್ಷ ಜನಸಂಖ್ಯೆ ಇರುವ ಅತಿದೊಡ್ಡ ಸಮುದಾಯಕ್ಕೆ ಪ್ರಾಧಿಕಾರ ರಚನೆ ಅಗತ್ಯವಾಗಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆದ ಸಮುದಾಯದ ಮುಖಂಡ ಸಭೆಯಲ್ಲಿ ಮೇಲ್ಕಂಡ ಮನವಿ ಮಾಡಲಾಗಿದೆ. ರಾಜ್ಯ ಸರಕಾರದ ಪರವಾಗಿ ಕಂದಾಯ ಸಚಿವ ಆರ್.ಅಶೋಕ್, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಸೇರಿದಂತೆ ಇನ್ನಿತರರು ಮನವಿ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News