ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ.ಶಿವಕುಮಾರ್

Update: 2021-02-23 05:49 GMT

ಬೆಂಗಳೂರು, ಫೆ.23: 'ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ. ಸರಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಕಳೆದ ಒಂದು ತಿಂಗಳಲ್ಲೇ ಎರಡನೇ ಬಾರಿ ಇಂತಹ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು, ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ. ಆದರೆ ತನ್ನ ಆಂತರಿಕ ಸಮಸ್ಯೆಗಳಲ್ಲೇ ಮುಳುಗಿರುವ ಈ ಸರಕಾರಕ್ಕೆ ಇತ್ತ ಗಮನಹರಿಸಲು ಸಾಧ್ಯವಾಗಿಲ್ಲ. ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂತಹ ದುರಂತ ಮರುಕಳಿಸುತ್ತಿರಲಿಲ್ಲ ಎಂದು ಡಿಕೆಶಿ ಕಿಡಿಕಾರಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದವಾಗಿದೆ. ಹೇಳಿಕೆ ನೀಡುವ ಸರಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧಜೀವಿಗಳ ಬಲಿ ಆಗಿರುವುದು.

ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿಲ್ಲ ಎಂಬುದಕ್ಕೆ ಈ ದುರಂತ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಈ ಸರಕಾರ ಹೇಳುವುದೊಂದು, ಮಾಡುವುದೊಂದು. ಸರಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜತೆಗೆ ಈ ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಾಜ್ಯ ಸರಕಾರ ಇನ್ನಾದರೂ ನಿಜವಾಗಿ ಎಚ್ಚೆತ್ತುಕೊಂಡು, ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News