​ಉಡುಪಿ: ಜ.2ರ ಬಳಿಕ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಬಲಿ

Update: 2021-02-25 14:51 GMT

ಉಡುಪಿ, ಫೆ.25: ಕಳೆದ ಜ.2ರ ಬಳಿಕ ಜಿಲ್ಲೆಯಲ್ಲಿ ಕೋವಿಡ್-19ಕ್ಕೆ ಉಡುಪಿಯ 67ರ ಹರೆಯದ ವೃದ್ಧರೊಬ್ಬರು ಬಲಿ ಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 190ಕ್ಕೇರಿದೆ. ಮಧುಮೇಹ ಹಾಗೂ ಕಿಡ್ನಿ ತೊಂದರೆಯಿಂದ ಬಳಲುತಿದ್ದ ಇವರು ಉಸಿರಾಟದ ತೊಂದರೆಗಾಗಿ ಫೆ.19ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗುರುವಾರ ಜಿಲ್ಲೆಯ ಒಟ್ಟು 12 ಮಂದಿಯಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. ದಿನದಲ್ಲಿ 11 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 63ರಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಏಳು ಮಂದಿ ಪುರುಷರು ಹಾಗೂ ಐವರು ಮಹಿಳೆಯರು. ಇವರಲ್ಲಿ ಏಳು ಮಂದಿ ಉಡುಪಿ ತಾಲೂಕಿನವರಾದರೆ, ಒಬ್ಬರು ಕುಂದಾಪುರ ಹಾಗೂ ಮೂವರು ಕಾರ್ಕಳ ತಾಲೂಕಿನವರು. ಅಲ್ಲದೇ ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದ ಒಬ್ಬರಲ್ಲೂ ಸೋಂಕು ಪತ್ತೆಯಾಗಿದೆ. ಇವರಲ್ಲಿ ಎಂಟು ಮಂದಿ ಹೋಮ್ ಐಸೋಲೇಷನ್‌ನಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಮಂಗಳವಾರ 11 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,316ಕ್ಕೇರಿದೆ.

1038 ಮಂದಿ ನೆಗೆಟಿವ್: ಬುಧವಾರ ಜಿಲ್ಲೆಯ 1050 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1038 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 12 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,569 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,63,519 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,39,950 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News