79ನೇ ಹುಟ್ಟುಹಬ್ಬ: ಸಿಎಂ ಬಿಎಸ್‌ವೈಗೆ ಪ್ರಧಾನಿ ಸೇರಿ ಗಣ್ಯರ ಶುಭ ಹಾರೈಕೆ

Update: 2021-02-27 14:23 GMT

ಬೆಂಗಳೂರು, ಫೆ. 27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ 79ನೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಬಿಎಸ್‍ವೈ ಅವರಿಗೆ ಶುಭ ಹಾರೈಸಿದ್ದಾರೆ.

ಶನಿವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿತ್ತು. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರು ಕುಟುಂಬ ಸದಸ್ಯರೊಂದಿಗೆ ಇಲ್ಲಿನ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದೇ ವೇಳೆ ಕುಟುಂಬ ಸದಸ್ಯರು ಆರತಿ ಬೆಳಗಿ ಶುಭ ಕೋರಿದರು.

ಆ ಬಳಿಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ, ಬೈರತಿ ಬಸವರಾಜು, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಪುಷ್ಪಗುಚ್ಛವನ್ನು ನೀಡಿ ಶುಭ ಹಾರೈಸಿದರು.

‘ಬಿ.ಎಸ್.ಯಡಿಯೂರಪ್ಪ ನಮ್ಮ ಹಿರಿಯ ಅನುಭವಿ ನಾಯಕ, ತಮ್ಮ ಜೀವನವನ್ನು ರೈತರು, ಬಡವರ ಅಭಿವೃದ್ಧಿಗಾಗಿ ಮುಡಿಪಾಗಿಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಆಯಸ್ಸು ನೀಡಲಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ಟ್ವಿಟ್ಟರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಶುಭ ಕೋರಿದ್ದಾರೆ.

ಶಕ್ತಿ ನೀಡಲಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ' ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಟ್ವಿಟ್ಟರ್ ಮೂಲಕ ಶುಭ ಹಾರೈಸಿದ್ದಾರೆ.

‘ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ದಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ' ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕೋರಿದ್ದಾರೆ.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು- ಆರೋಗ್ಯದ ಭಾಗ್ಯ ತಮ್ಮದಾಗಲಿ ಎಂದು ಹಾರೈಸುತ್ತೇನೆ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News