ಮೈಸೂರು ಮೇಯರ್ ಆಯ್ಕೆ ಚುನಾವಣೆ: ಕಾಂಗ್ರೆಸ್ ಬಳಿಕ ಜೆಡಿಎಸ್ ನಲ್ಲೂ ಆಂತರಿಕ ಭಿನ್ನಮತ

Update: 2021-02-27 17:55 GMT

ಮೈಸೂರು,ಫೆ.27: ಮೈಸೂರು ಮೇಯರ್ ಉಪಮೇಯರ್ ಆಯ್ಕೆ ಚುನಾವಣೆಯ ಬೆನ್ನಲ್ಲೇ ಈಗಾಗಲೇ ಕಾಂಗ್ರೆಸ್ ನಲ್ಲಿ ಅಪಸ್ವರಗಳೆದ್ದಿದ್ದು, ಕಾಂಗ್ರೆಸ್ ಬೆನ್ನಲ್ಲೇ ಇದೀಗ ಜೆಡಿಎಸ್ ನಲ್ಲೂ ಆಂತರಿಕ ಭಿನ್ನಮತ ಭುಗಿಲೆದ್ದಿದೆ.

ಮೈಸೂರು ನಗರ ಜೆಡಿಎಸ್ ಅಧ್ಯಕ್ಷ ಕೆ.ಟಿ.ಚೆಲುವೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ, ಮೇಯರ್ ಉಪ ಮೇಯರ್ ಆಯ್ಕೆ ಚುನಾವಣೆಯಲ್ಲಿ ಭಾಗಿಯಾಗದೇ ದೂರ ಉಳಿದ ಶಾಸಕ ಜಿ.ಟಿ.ದೇವೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಜೆಡಿಎಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಒತ್ತಾಯ ಮಾಡಲಾಗಿದೆ. ಈ ಇಬ್ಬರೂ ಕೂಡಾ ಉದ್ದೇಶಪೂರ್ವಕವಾಗಿ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ಇದ್ದುಕೊಂಡು ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಜಿ.ಟಿ.ದೇವೇಗೌಡರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪಕ್ಷವೇ ಅವರನ್ನು ಅಮಾನತು ಮಾಡಬೇಕು ಎಂದು ಚೆಲುವೇಗೌಡ ಒತ್ತಾಯಿಸಿದರು.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತರಾಗಿರುವ ಜಿ.ಟಿ.ದೇವೇಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಜಿ.ಟಿ.ದೇವೇಗೌಡರು ಪಕ್ಷೇತರರಾಗಿ ಸ್ಪರ್ಧಿಸಿ ತಮ್ಮ ಶಕ್ತಿ ತೋರಿಸಲಿ ಎಂದು ಸವಾಲು ಹಾಕಿದರು.

ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಜಿ.ಟಿ.ದೇವೇಗೌಡರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡರೆ ನಾವೆಲ್ಲರೂ ಜೆಡಿಎಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ರವಿಕುಮಾರ್, ಜಿ.ಪಂ.ಸದಸ್ಯ ಮಾದೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News