ವಿಧಾನಮಂಡಲ ಅಧಿವೇಶನ: ಮಾ.4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಮಾ. 1: ವಿಧಾನ ಮಂಡಲ ಬಜೆಟ್ ಅಧಿವೇಶನ ಮಾ.4ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಸರಕಾರದ ವೈಫಲ್ಯಗಳ ವಿರುದ್ಧ ಕಲಾಪದಲ್ಲಿ ಹೋರಾಟ ರೂಪಿಸುವ ಸಂಬಂಧ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮಾ.4ರ ಬೆಳಗ್ಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-106ರಲ್ಲಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಆರ್.ಧ್ರುವನಾರಾಯಣ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು ಭಾಗವಹಿಸಲಿದ್ದಾರೆ.
ಮಾ.4ರಿಂದ ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.8ಕ್ಕೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ, ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆಗೆ ಒತ್ತಾಯಿಸಿ ಕುರುಬ ಸಮುದಾಯದ ಹೋರಾಟ, ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದಲ್ಲಿ ಸರಕಾರದ ನಿರ್ಲಕ್ಷ್ಯತೆಯನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಗೊತ್ತಾಗಿದೆ.