ಮೀಸಲಾತಿ ಸಮಾವೇಶ: ಕೊರೋನ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕೈಗೊಂಡ ವಿವರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2021-03-01 17:02 GMT

ಬೆಂಗಳೂರು, ಮಾ.1: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಲು ಆಗ್ರಹಿಸಿ ಫೆ.21ರಂದು ನಡೆದ ಸಮಾವೇಶದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಕೊರೋನ ನಿಯಮಗಳನ್ನು ಜಾರಿಗೊಳಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರವರ್ಗ 2ಎಗೆ ಸೇರಿಸಲು ಆಗ್ರಹಿಸಿ ಫೆ.21ರಂದು ನಗರದಲ್ಲಿ ನಡೆದ ಸಮಾವೇಶದಲ್ಲಿ ಮಾಸ್ಕ್ ಧರಿಸದ, ಸುರಕ್ಷಿತ ಅಂತರ ಕಾಯ್ದುಕೊಳ್ಳದವರ ವಿರುದ್ಧ ಏನೇಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ ಪೀಠ, ಕ್ರಮ ಕೈಗೊಳ್ಳುವ ಬಗ್ಗೆ ಒಂದು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿತು.

ಈ ವೇಳೆ ಭಾರತೀಯ ಜನತಾ ಪಕ್ಷದ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಕಳೆದ ಫೆ.26ರಂದು ಬಿಜೆಪಿ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ತಾವು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿಲ್ಲ. ಈವರೆಗೆ ಯಾವುದೇ ರ್‍ಯಾಲಿ, ಸಾರ್ವಜನಿಕ ಸಭೆ, ರೋಡ್ ಶೋ ನಡೆಸಿಲ್ಲ ಎಂದಿದೆ. ಇದು ಒಪ್ಪುವಂತಹ ವಿಚಾರವಲ್ಲ ಎಂದು ಆಕ್ಷೇಪಿಸಿತು. ಈ ಹಿನ್ನೆಲೆಯಲ್ಲಿ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸುವುದಾಗಿ ಪಕ್ಷದ ಪರ ವಕೀಲರು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಈ ಸಂಬಂಧ ಒಂದು ವಾರದಲ್ಲಿ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿತು. ಇನ್ನು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಅಡಿ ಕ್ರಮ ಜರುಗಿಸುವ ಸಂಬಂಧ ರೂಪಿಸಿರುವ ನಿಯಮಗಳ ಕುರಿತು ಮಾಹಿತಿ ನೀಡುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಮಾ.12ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News