ಮಾ.15ರೊಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ: ಕೋಡಿಹಳ್ಳಿ ಚಂದ್ರಶೇಖರ್

Update: 2021-03-02 12:46 GMT

ಬೆಂಗಳೂರು, ಮಾ.2: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ನಗರದ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದ್ದಾರೆ. 

ಮಂಗಳವಾರ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ನಾಲ್ಕು ನಿಗಮದ ಸಾರಿಗೆ ನೌಕರರು, ಮಾ.15ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಹಂತ, ಹಂತವಾಗಿ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ. 

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕಳೆದ ಡಿಸೆಂಬರ್‍ನಲ್ಲಿ ನಾಲ್ಕು ಸಾರಿಗೆ ನಿಗಮಗಳ ಕಾರ್ಯಾಚರಣೆ ಸ್ಥಗಿತಗೊಳಿಸಿ ಸಾರಿಗೆ ನೌಕರರ 9 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸರಕಾರ ಹಂತ, ಹಂತವಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಭರವಸೆ ಈಡೇರಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

6ನೇ ವೇತನ ಆಯೋಗದ ಶಿಫಾರಸ್ಸಿಗೆ ಬಜೆಟ್‍ನಲ್ಲಿ ಅನುದಾನ ಮೀಸಲಿಟ್ಟು, ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಈಗಲೇ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಹಾಗೂ ಹಿರಿಯ ಅಧಿಕಾರಿಗಳಿಂದ ಆಗುತ್ತಿರುವ ಅನಗತ್ಯ ಕಿರುಕುಳವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದರೆ ಮಾ.15ರ ನಂತರ ಹೋರಾಟವನ್ನು ತೀವ್ರಗೊಳಿಸಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆನಂದ್ ಮಾತನಾಡಿ, ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಸರಕಾರವೇ ಹೇಳಿದಂತೆ ಮಾ.15ರವರೆಗೆ ಗಡುವಿದೆ. ಗಡುವಿನೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ಹೋರಾಟ ರೂಪಿಸುತ್ತೇವೆಂದು ತಿಳಿಸಿದ್ದಾರೆ.

ಡಿಸೆಂಬರ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವು ಸಾರಿಗೆ ನೌಕರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಎಲ್ಲ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಕೆಳ ಹಂತದ ಸಾರಿಗೆ ನೌಕರರ ಸಮಸ್ಯೆಗಳಿಗೆ ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡಿ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 

'ಬೆದರಿಕೆಯಲ್ಲ ಮನವಿ'
ಇಂದಿನ ಪ್ರತಿಭಟನೆಗೆ ಸಾರಿಗೆ ನೌಕರರು ಸಾರ್ವಜನಿಕರಿಗೆ ತೊಂದರೆಯಾಗದಂತೆ ರಜೆ ಇರುವ ಹಾಗೂ ಪಾಳಿ ಕೆಲಸ ಮುಗಿಸಿದ ನೌಕರರು ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ನಾವು ಸರಕಾರಕ್ಕೆ ಯಾವುದೇ ಬೆದರಿಕೆ ಹಾಕುತ್ತಿಲ್ಲ. ನಮ್ಮ ಕನಿಷ್ಠ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡುತ್ತಿದ್ದೇವೆ.
-ಆನಂದ್, ಕಾರ್ಯದರ್ಶಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News