ಬೆಲೆ ಏರಿಕೆ ನಿಯಂತ್ರಿಸಬೇಕಾದರೆ ಬಿಜೆಪಿಯನ್ನು ಸೋಲಿಸುವುದೊಂದೆ ಪರಿಹಾರ: ಡಿ.ಕೆ.ಶಿವಕುಮಾರ್

Update: 2021-03-02 13:11 GMT

ಬೆಂಗಳೂರು, ಮಾ.2: ದೇಶ ಹಾಗೂ ರಾಜ್ಯದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕಾದರೆ ಮುಂಬರುವ ಎಲ್ಲ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೊಂದೆ ಪರಿಹಾರವೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಇಂಧನ ದರ ಏರಿಕೆ ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ನಗರದ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೋವಿಡ್-19 ಸಂಕಷ್ಟದ ಕಾಲದಲ್ಲಿ ಎಲ್ಲ ವಸ್ತುಗಳ ಮೇಲಿನ ತೆರಿಗೆಯು ಕಡಿಮೆಯಾಗಬೇಕಿತ್ತು. ಆದರೆ, ಕೇಂದ್ರ ಹಾಗೂ ರಾಜ್ಯದಲ್ಲಿ ಜನವಿರೋಧಿ ಸರಕಾರ ಇರುವುದರಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ಈ ಬೆಲೆಯು ನಿಯಂತ್ರಣಕ್ಕೆ ಬರಬೇಕಾದರೆ ಬಿಜೆಪಿ ಆಡಳಿತದಿಂದ ದೂರವಿಡುವುದೊಂದೆ ಪರಿಹಾರವೆಂದು ಅವರು ತಿಳಿಸಿದ್ದಾರೆ. 

ಜಾಗೃತಿ ಸಭೆ ಆಯೋಜನೆ: ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಕಾಲಾವಧಿಯಲ್ಲಿ ಜಾರಿಯಾಗಿರುವ ಜನವಿರೋಧಿ ನೀತಿಗಳ ಬಗ್ಗೆ ಪ್ರತಿ ಮನೆಗೆ ಹೋಗಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತೆನೆಂದು ಭರವಸೆ ನೀಡಿದ್ದಾರೆ. ಆದರೆ, ಈಗ ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಲೇ ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರ ಕೂಡಲೇ ಬೆಲೆ ಏರಿಕೆಯನ್ನು ಕಡಿಮೆ ಮಾಡದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಶಾಸಕ ಕೃಷ್ಣಬೈರೇ ಗೌಡ, ಸೌಮ್ಯಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಾವಿರಾರು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News