ಸಿಡಿ ಬಿಡುಗಡೆ ಮಾಡಿರುವ ವ್ಯಕ್ತಿ ವಿರುದ್ದ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಬಾಲಚಂದ್ರ ಜಾರಕಿಹೊಳಿ

Update: 2021-03-03 05:37 GMT

ಬೆಂಗಳೂರು, ಮಾ.3: ಇದೊಂದು ನಕಲಿ‌ ಸಿಡಿಯಾಗಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಗತ್ಯವಿಲ್ಲ. ಸಿಡಿ ಬಿಡುಗಡೆ ಮಾಡಿರುವ ವ್ಯಕ್ತಿ ವಿರುದ್ದ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ವಕೀಲರ ಜತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಅಶ್ಲೀಲ ವೀಡಿಯೋ ವಿವಾದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜತೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಇದೊಂದು ನಕಲಿ‌ ಸಿಡಿಯಾಗಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ. ಪ್ರಕರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಈ ರೀತಿ ಸಿಡಿಗಳನ್ನು ಗಂಭೀರವಾಗಿ ಪರಿಗಣಿಸಿಕೊಂಡು ಹೋದರೆ ರಾಜಕಾರಣ ಮಾಡುವುದೇ ಕಷ್ಟವಾಗುತ್ತದೆ. ಜಾರಕಿಹೊಳಿ ಕುಟುಂಬದ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಈ ಘಟನೆಯ ಬಗ್ಗೆ ಸತ್ಯಾಸತ್ಯತೆ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಸಿಎಂಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಅಕಸ್ಮಾತ್ ರಮೇಶ್ ಜಾರಕಿಹೊಳಿ ತಪ್ಪು ಮಾಡಿದ್ದರೆ ಅವರು ರಾಜ್ಯದ ಜನತೆ ಮುಂದೆ ಕೈಮುಗಿದು ರಾಜೀನಾಮೆ ಸಲ್ಲಿಸುವಂತೆ ನಾನೇ ಹೇಳುತ್ತೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News