ಬೆಲೆ ಏರಿಕೆ ಖಂಡಿಸಿ ರಾಜ್ಯ ಅಕ್ಷರದಾಸೋಹ ನೌಕರರ ಪ್ರತಿಭಟನಾ ಮೆರವಣಿಗೆ

Update: 2021-03-04 16:18 GMT

ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಧೋರಣೆಗಳನ್ನು ಖಂಡಿಸಿ ರಾಜ್ಯ ಅಕ್ಷರದಾಸೋಹ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣ ಮಾತನಾಡಿ ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಕಷ್ಟಕರವಾಗಿದೆ. ಕೊರೋನದಿಂದ ಈಗಾಗಲೇ ಕಷ್ಟ ಅನುಭವಿಸಿರುವ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಕಳೆದ 2 ತಿಂಗಳಿನಿಂದ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರು ಸಂಕಷ್ಟಕ್ಕೆ ಗುರಿಮಾಡಿದೆ. ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇಲ್ಲ. ಕೂಡಲೇ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ದೇಶದ್ಯಾಂತ ಮಾರಕ ಕೃಷಿ ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿ ಕಳೆದ ಹಲವು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈವರೆಗೆ ರೈತರ ಒತ್ತಾಯಕ್ಕೆ ಮಣಿಯುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಮಾರಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ರೈತರು ಆರ್ಥಿಕವಾಗಿ ಸಬಲರಾಗುವ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ ಮಾತನಾಡಿ, ಬಿಸಿಯೂಟ ನೌಕರರು ಹಲವು ಸಮಸ್ಯೆ ಅನುಭವಿಸುತ್ತಿದ್ದು, ಬಿಸಿಯೂಟ ಯೋಜನೆಯನ್ನು ಬಲಿಷ್ಟಗೊಳಿಸುವುದು, ನೌಕರರ ಖಾಯಂ, ಎಲ್‍ಐಸಿ ಆಧಾರಿತ ಪಿಂಚಣಿ, ಬಾಕಿ ವೇತನ ಪಾವತಿ, ಕನಿಷ್ಟ 24 ಸಾವಿರ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ತಾಲೂಕು ಅಧ್ಯಕ್ಷೆ ಉಮಾ, ಚೆನ್ನಮ್ಮ, ಶಾಂತಮ್ಮ, ಕಾಂತಮ್ಮ, ಶ್ರೀಮಂಜುಳಾ, ನಾರಾಯಣಮ್ಮ, ಭಾಗ್ಯಮ್ಮ, ತಿಪ್ಪಮ್ಮ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News