ಸಾರಿಗೆ ನಿಗಮಗಳಿಗೆ 4 ಸಾವಿರ ಕೋಟಿ ರೂ. ನಷ್ಟ: ಡಿಸಿಎಂ ಲಕ್ಷ್ಮಣ್ ಸವದಿ

Update: 2021-03-05 14:13 GMT

ಬೆಂಗಳೂರು, ಮಾ.5: ರಾಜ್ಯದಲ್ಲಿ ಕೊರೋನ ಬಂದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾದ ಬಳಿಕ ರಾಜ್ಯದ 4 ಸಾರಿಗೆ ನಿಗಮಗಳಿಗೆ ಸುಮಾರು 4 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, ಸಾರಿಗೆ ನಿಗಮಗಳಿಗೆ ಆಗಿರುವ ನಷ್ಟವನ್ನು ಸರಿದೂಗಿಸಲು ಈ ಸಲದ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿರುವ ಸ್ಯಾಟ್‍ಲೈಟ್ ಬಸ್ ನಿಲ್ದಾಣ ಮಾದರಿಯಂತೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶ ಸರಕಾರಕ್ಕಿದೆ. ದಾವಣಗೆರೆಯಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇವೆ ಎಂದು ಹೇಳಿದರು.

ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬಂದರೆ, ಅಲ್ಲಿ ಅವರಿಗೆ ಶಾಪಿಂಗ್ ಜೊತೆಗೆ, ಮನರಂಜನೆ ಸಿಗುವಂತೆ, ಚಿತ್ರಮಂದಿರಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ 551 ಸರಕಾರಿ ಬಸ್ ನಿಲ್ದಾಣಗಳಿದ್ದು, ಈ ನಿಲ್ದಾಣಗಳಲ್ಲಿ ಮಹಿಳೆಯರ ವಿಶ್ರಾಂತಿ ಕೊಠಡಿ, ಶೌಚಾಲಯ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುವುದಾಗಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News