ಮುಸ್ಲಿಮ್ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಸೇವಾ ವಿಲೀನ ಮಾಡಲಾಗಿದೆ: ಶ್ರೀಮಂತ್ ಪಾಟೀಲ್

Update: 2021-03-05 14:27 GMT

ಬೆಂಗಳೂರು, ಮಾ.5: ರಾಜ್ಯಾದ್ಯಂತ ಮುಸ್ಲಿಮ್ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಇತ್ತೀಚೆಗೆ ಸೇವಾ ವಿಲೀನ ಮಾಡಿಕೊಳ್ಳಲಾಗಿದೆ ಹಾಗೂ ಇವರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ್ ಪಾಟೀಲ್ ಹೇಳಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ಪರವಾಗಿ ಕೆ.ಟಿ.ಶ್ರೀಕಂಠೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರಕಾರಿ ಮುಸ್ಲಿಮ್ ವಸತಿ ಶಾಲೆಯನ್ನು ಈ ಮೊದಲು ಮುಸ್ಲಿಮ್ ಸಮುದಾಯದ ಟ್ರಸ್ಟ್ ನಡೆಸುತ್ತಿತ್ತು. ಆದರೆ ಅದನ್ನು ಸರಕಾರದ ವಶಕ್ಕೆ ಪಡೆದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ವರ್ಗಾಯಿಸಿತು. ಆನಂತರ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬಂತು. ಇದೀಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಸ್ಲಿಮ್ ವಸತಿ ಶಾಲೆಗಳನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಈ ಹಿಂದೆ ಈ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರು ಹೊರಗುತ್ತಿಗೆ ಆಧಾರದ ಮೇಲೆ ಅವರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಕೆಲವು ವರ್ಷಗಳಿಂದ ಇತ್ತೀಚೆಗೆ ಅವರ ಸೇವಾ ವಿಲೀನ ಮಾಡಿಕೊಳ್ಳಲಾಗಿದೆ. ಅವರಿಗೆ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ. ಆದರೂ ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 100 ಮೊರಾರ್ಜಿ ದೇಸಾಯಿ ವಸತಿ ಶಾಲೆ, 8 ಮಾದರಿ ವಸತಿ ಶಾಲೆ(ನವೋದಯ) ಹಾಗೂ 5 ಸರಕಾರಿ ಮುಸ್ಲಿಂ ವಸತಿ ಶಾಲೆ ಸೇರಿ 113 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲ ವಸತಿ ಶಾಲೆಗಳಿಗೆ 1163 ಬೋಧಕ ಸಿಬ್ಬಂದಿ, 1475 ಬೋಧಕೇತರ ಸಿಬ್ಬಂದಿ ಮಂಜೂರಾಗಿದೆ. ಈ ಪೈಕಿ 557 ಬೋಧಕ ಸಿಬ್ಬಂದಿ ಮತ್ತು 1233 ಬೋಧಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಸರಕಾರಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ವೇತನ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುವ ಸಂಬಂಧವೂ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳು ಹಾಗೂ ಮಾದರಿ ವಸತಿ ಶಾಲೆ ನವೋದಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು 2016-17ನೆ ಸಾಲಿನಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News