ಐಎಂಎ ಹಗರಣ: ಹೇಮಂತ್ ನಿಂಬಾಳ್ಕರ್ ಅರ್ಜಿ ವಿಚಾರಣೆ ಪೂರ್ಣ; ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

Update: 2021-03-06 15:24 GMT

ಬೆಂಗಳೂರು, ಮಾ.6: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಸಿಬಿಐ ದಾಖಲಿಸಿರುವ ಎಫ್‍ಐಆರ್ ರದ್ದು ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿತು.

ಇದೇ ವೇಳೆ, ಈ ಹಿಂದೆ ಸಿಬಿಐಗೆ ನಿರ್ದೇಶಿಸಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಪ್ರಕರಣ ಸಂಬಂಧ ಸಿಬಿಐ ತನಿಖೆ ಮುಂದುವರಿಸಬಹುದಾದರೂ ಅಂತಿಮ ವರದಿಯನ್ನು ಸಲ್ಲಿಸಬಾರದು ಎಂದು ಸ್ಪಷ್ಟಪಡಿಸಿತು ಎಂದು ಹೇಳಲಾಗುತ್ತಿದೆ.

ಏನಿದು ಪ್ರಕರಣ?: ವಂಚನೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪಾತ್ರವಿದ್ದು, ತನಿಖೆ ನಡೆಸಲು ಅನುಮತಿ ಕೋರಿ ಸಿಬಿಐ ಸರಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಸರಕಾರ 2020ರ ಸೆಪ್ಟೆಂಬರ್ 9ರಂದು ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿ ವಿಶೇಷ ನ್ಯಾಯಾಲಯಕ್ಕೆ ಎಫ್‍ಐಆರ್ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News