ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಪ್ರೋತ್ಸಾಹಿಸಿ: ಶೀಲಾ ಕೆ. ಶೆಟ್ಟಿ

Update: 2021-03-08 15:23 GMT

ಉಡುಪಿ, ಮಾ.8: ದೇಶದಲ್ಲಿ ಹೆಣ್ಣಿಗೆ ಪೂಜ್ಯವಾದ ಸ್ಥಾನವಿದೆ. ಇಂದು ಮಹಿಳೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾಳೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡುವುದು ಪ್ರತಿ ತಾಯಂದಿರ ಕರ್ತವ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದ್ದಾರೆ.

ಸೋಮವಾರ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಉಡುಪಿ, ಚೈತನ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಸಖೀ ಒನ್ ಸ್ಟಾಪ್ ಸೆಂಟರ್ ಉಡುಪಿ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಹಿಳೆ ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೇ ಎಲ್ಲಾ ಕ್ಷೇತ್ರದಲ್ಲೂ ಗುರುತಿಸಿ ಕೊಂಡಿದ್ದಾಳೆ. ಮಹಿಳಾ ಸಮಾನತೆ ಮೊದಲು ಮನೆಯಿಂದಲೇ ಶುರುವಾಗಬೇಕು. ಹೆಣ್ಣು ಸಂಸಾರದ ಜೊತೆ ಜೊತೆಗೆ ಸಮಾಜದ ಕಡೆಗೂ ಗಮನ ಹರಿಸಬೇಕು. ಶಿಕ್ಷಣ ಇಲ್ಲದೇ ಮಹಿಳೆ ಮುಂದೆ ಬರಲು ಸಾಧ್ಯವಿಲ್ಲ. ಆದ್ದರಿಂದ ಗಂಡು ಹೆಣ್ಣು ಎಂಬ ಬೇಧ-ಭಾವ ಮಾಡದೇ ಶಿಕ್ಷಣವನ್ನು ಕೊಡಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಇಂದು ಹೆಣ್ಣು ಎಲ್ಲಾ ಕ್ಷೇತ್ರದಲ್ಲೂ ಬಹಳಷ್ಟು ಮುಂದುವರೆದಿದ್ದಾರೆ. ಮನೆಯಿಂದಲೇ ಉದ್ಯೋಗ ಮಾಡಿ, ಮನೆಯಲ್ಲೇ ಕುಳಿತು ಆದಾಯ ಗಳಿಸುತ್ತಿದ್ದಾಳೆ. ಮಹಿಳೆಯರ ರಕ್ಷಣೆಗಾಗಿ ಅನೇಕ ಕಾನೂನುಗಳಿವೆ. ಸಮಾಜದಲ್ಲಿ ವರದಕ್ಷಿಣೆ ಕಿರುಕುಳ, ಹೆಣ್ಣು ಮಕ್ಕಳ ಮಾರಾಟ-ಸಾಗಾಟ, ಇಂತಹ ಅನಿಷ್ಟಗಳ ಬಗ್ಗೆ ಮಹಿಳೆಯರು ಜಾಗೃತವಾಗಿರಬೇಕು ಎಂದರು.

ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಬಿ ಕಾಂಚನ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯ ಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಕೃಷ್ಣ ಯೋಗ ಕೇಂದ್ರ ನಿರ್ದೇಶಕಿ ಅಕೀಲಾ ಶೆಟ್ಟಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ, ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಆರ್. ಕಲ್ಕೂರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News