ಜನರನ್ನು ದಾರಿ ತಪ್ಪಿಸುವ ಬಗ್ಗೆ ಪಿಎಚ್ಡಿ ಮಾಡಿ ಬಜೆಟ್ ರೂಪಿಸಿದಂತಿದೆ: ಡಿ.ಕೆ.ಶಿವಕುಮಾರ್

Update: 2021-03-08 16:50 GMT

ಬೆಂಗಳೂರು, ಮಾ. 8: ಜನರನ್ನು ಹೇಗೆಲ್ಲಾ ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಪಿಎಚ್.ಡಿ ಮಾಡಿ ಈ ಬಜೆಟ್ ರೂಪಿಸಿದಂತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ಕೇಂದ್ರದ ನೆರವೂ ಸಿಕ್ಕಿಲ್ಲ. ಜಿಎಸ್ಟಿ ಸಾಲದ ಮೊರೆ ಅನಿವಾರ್ಯವಾಗಿದೆ ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಷಣದ ಆರಂಭದಲ್ಲೇ ವಿವರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ ವರ್ಷ ಮಾಡಿಕೊಂಡಿರುವ ಸಾಲವನ್ನೇ ತೀರಿಸಲು ಆಗಿಲ್ಲ. ಈಗ ಹೊಸದಾಗಿ 70 ಸಾವಿರ ಕೋಟಿ ರೂ.ಸಾಲದ ಹೊರೆ ರಾಜ್ಯದ ಜನರ ತಲೆ ಮೇಲೆ ಬೀಳಲಿದೆ. ‘ಸಾಲ ಮಾಡಿ ತುಪ್ಪ ತಿನ್ನು' ಎಂದು ಸಾಲಗಾರರನ್ನು ಅಣಕಿಸುವ ಮಾತಿದೆ. ಆದರೆ, ಈ ಸರಕಾರ ಸಾಲ ಮಾಡಿ ಜನರಿಗೆ ಮಣ್ಣು ತಿನ್ನಿಸಲು ಹೊರಟಿದೆ' ಎಂದು ವಾಗ್ದಾಳಿ ನಡೆಸಿದರು.

‘ರಾಜ್ಯಗಳ ಜಿಎಸ್ಟಿ ಪಾಲು ಹಂಚುವಾಗ ಗುಜರಾತ್, ಅಸ್ಸಾಂ ಮತ್ತಿತರ ರಾಜ್ಯಗಳ ಕಣ್ಣಿಗೆ ಬೆಣ್ಣೆ ಹಚ್ಚಿದ ಕೇಂದ್ರ ಸರಕಾರ ರಾಜ್ಯದ ಕಣ್ಣಿಗೆ ಸುಣ್ಣ ಸುರಿದಿದೆ. ಅದನ್ನು ರಾಜ್ಯ ಸರಕಾರವಾಗಲಿ, ರಾಜ್ಯದಿಂದ ಕೇಂದ್ರ ಪ್ರತಿನಿಧಿಸುತ್ತಿರುವ ಎರಡು ಡಜನ್ ಸಂಸದರು ಪ್ರಶ್ನಿಸುವ ಗೋಜಿಗೆ ಹೋಗಲಿಲ್ಲ. ಅದರ ಫಲವೇ ಈಗ ರಾಜ್ಯದ ಜನರ ತಲೆ ಮೇಲೆ ಬೀಳುತ್ತಿರುವ ಸಾಲದ ಹೊರೆ.

ಆದರೂ ಜನರ ಕಣ್ಣಿಗೆ ಮಣ್ಣೆರೆಚುವ ರೀತಿಯಲ್ಲಿ ಘೋಷಣೆಗಳ ಮೇಲೆ ಘೋಷಣೆಗಳನ್ನು ಸಿಎಂ ಪ್ರಕಟಿಸಿದ್ದಾರೆ. ಆದರೆ ಇದಕ್ಕೆ ಸಂಪನ್ಮೂಲ ಕ್ರೋಡೀಕರಣ ಹೇಗೆ? ಎಲ್ಲಿಂದ ದುಡ್ಡು ತರುತ್ತಾರೆ ಎಂಬುದನ್ನೇ ಹೇಳಿಲ್ಲ. ಹೀಗಾಗಿ ಈ ಘೋಷಣೆಗಳೆಲ್ಲ ಘೋಷಣೆಯಾಗಿಯೇ ಉಳಿದುಕೊಳ್ಳುವ ಅಪಾಯವಿದೆ. ಪ್ರತಿ ಬಾರಿ ಬಜೆಟ್ ಅನ್ನು ಮಂಡಿಸುವಾಗ ಇಲಾಖೆವಾರು ಅನುದಾನ ಹಂಚಿಕೆ ಮಾಡಲಾಗುತ್ತದೆ. ಆಗ ಯಾವ ಇಲಾಖೆಗೆ ಏನು, ಎಷ್ಟು ಎಂಬುದು ತಿಳಿಯುತ್ತದೆ.

ಆದರೆ ಈಗ ಸರಕಾರ ವಲಯವಾರು ಘೋಷಣೆ ಮಾಡಿ ‘ಗುಂಪಲ್ಲಿ ಗೋವಿಂದಾ' ಎನ್ನುವಂತೆ ಜನರ ಕಣ್ಣಿಗೆ ಮಣ್ಣೆರಚಿದೆ. ಕೃಷಿಗೆ 31,028 ಕೋಟಿ ಘೋಷಿಸಿ, ಇದು ರೈತರಿಗೆ ಬಂಪರ್ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಇದು ಕೇವಲ ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ, ಅದಕ್ಕೆ ಪೂರಕವಾಗಿರುವ ನೀರಾವರಿ ಯೋಜನೆಗಳು, ತೋಟಗಾರಿಕೆ, ಕೃಷಿ ಮಾರುಕಟ್ಟೆ ಹೀಗೆ ಎಲ್ಲವನ್ನೂ ಒಳಗೊಂಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News