ಲೋಕಸಭೆ, ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಹೆಚ್ಚಾಗಲಿ: ಅರವಿಂದ ಲಿಂಬಾವಳಿ

Update: 2021-03-08 18:37 GMT

ಬೆಂಗಳೂರು, ಮಾ.8: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸಿರುವಂತೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಹಿಳಾ ಮಿಸಲಾತಿಯನ್ನು ಹೆಚ್ಚಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಪ್ರತಿಪಾದಿಸಿದ್ದಾರೆ.

ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಆಯೋಜಿಸಿದ ಮಹಿಳಾ ನಾದ ವೈಭವ-2021 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ರಾಜಕೀಯದಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸಬೇಕು ಎನ್ನುವ ಆಶಯ ಪೂರ್ಣವಾಗಿ ಜಾರಿಯಾಗಿಲ್ಲ. ಇದು ಅಗತ್ಯವಾಗಿ ಆಗಬೇಕಾದ ಕಾರ್ಯವಾಗಿದೆ. ಮಹಿಳೆಯರು ಕೇವಲ ಕೌಟುಂಬಿಕ ಮತ್ತು ಸಾಂಸ್ಕೃತಿಕವಾಗಿ ಬೆಳೆದರೆ ಸಾಲದು, ರಾಜಕೀಯವಾಗಿ ಬೆಳೆಯಬೇಕು ಎಂದು ಅವರು ಆಶಿಸಿದ್ದಾರೆ.

ಭಾರತವನ್ನು ಮಾತೆ ಎಂದು ಕರೆ ದೇಶದಲ್ಲಿ ಹೆಣ್ಣು ಭ್ರೂಣಹತ್ಯೆ ಸಂಪೂರ್ಣವಾಗಿ ನಿಂತಿಲ್ಲ. ಕೌಟುಂಬಿಕ ದೌರ್ಜನ್ಯದ ಪ್ರಮಾಣವು ಗಣನೀಯವಾಗಿದೆ. ಉನ್ನತ ಶಿಕ್ಷಣ ವಿಚಾರ ಬಂದಾಗ ಮದುವೆ ಮಾಡಿ ಕಳುಹಿಸಲು ಇರುವ ಆಸಕ್ತಿ ಅವರಿಗೆ ಶಿಕ್ಷಣ ಕೊಡಿಸುವುದರಲ್ಲಿ ಇರುವುದಿಲ್ಲ. ಇದು ಬದಲಾಗಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮ ಸಚಿವರನ್ನು ಸನ್ಮಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News