ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಿದ ಪ್ರತಿಪಕ್ಷ ಕಾಂಗ್ರೆಸ್
ಬೆಂಗಳೂರು, ಮಾ. 9: ‘ರಾಜ್ಯ ಸರಕಾರದ ಧೋರಣೆಯನ್ನು ವಿರೋಧಿಸಿ' ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ವಿಧಾನಸಭೆ ಮೊಗಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸರಕಾರ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡುವುದು ಒಂದು, ಸದನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವುದು ಮತ್ತೊಂದು. ಹೀಗಾಗಿ ನಾವು ಕಲಾಪ ಸಲಹಾ ಸಮಿತಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದೇವೆ ಎಂದರು.
ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸದೆ ಇರುವ ವಿಷಯಗಳನ್ನು ಸದನದಲ್ಲಿ ಸರಕಾರ ಚರ್ಚೆಗೆ ಕೈಗೆತ್ತಿಕೊಂಡಿತ್ತು. ಹೀಗಾಗಿ ಕಲಾಪ ಸಲಹಾ ಸಮಿತಿ ಏಕೆ ನಡೆಸಬೇಕು ಎಂದು ಪ್ರಶ್ನಿಸಿದ ಅವರು, ಸಲಹಾ ಸಮಿತಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದು ಅದರಿಂದ ದೂರ ಉಳಿದಿದೆ. ‘ಒಂದು ದೇಶ-ಒಂದು ಚುನಾವಣೆ' ವಿಷಯದ ಕುರಿತು ಚರ್ಚಿಸುವುದಾಗಿ ನಾವು ಹೇಳಿರಲಿಲ್ಲ.
ಪ್ರಶ್ನೋತ್ತರ ಕಲಾಪದಲ್ಲಿ ನಮ್ಮ ಪಕ್ಷದ ಸದಸ್ಯರು ಪಾಲ್ಗೊಳ್ಳುವುದಿಲ್ಲ. ಆದರೆ, ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸುತ್ತೇವೆ. ಬಜೆಟ್ ಮಂಡನೆ ವೇಳೆ ನೈತಿಕತೆ ವಿರೋಧಿಸಿ ಸಭಾತ್ಯಾಗ ಮಾಡಿದ್ದೆವು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಚರ್ಚೆ ನಡೆಸುತ್ತೇವೆ' ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.