ಕೃಷಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಬಿ.ಸಿ.ಪಾಟೀಲ್

Update: 2021-03-10 18:02 GMT

ಬೆಂಗಳೂರು, ಮಾ. 10: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳು ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಸಿಎಂ ಹಾಗೂ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಎಚ್.ಡಿ.ರೇವಣ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಇಲಾಖೆಯಲ್ಲಿ 8,141 ಹುದ್ದೆಗಳಿವೆ. ಆ ಪೈಕಿ 4,093 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉಳಿದ 3,851 ಹುದ್ದೆಗಳು ಖಾಲಿ ಇವೆ. ಆಡಳಿತಕ್ಕೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಹೊರಗುತ್ತಿಗೆ ಆಧಾರದ ಮೇಲೆ 2,455 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಖಾಲಿ ಇರುವ ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ಭರ್ತಿ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಸಿಎಂ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆದಿದೆ. ಅನುಮತಿ ಸಿಕ್ಕ ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

ಇದಕ್ಕೆ ಆಕ್ಷೇಪಿಸಿದ ಎಚ್.ಡಿ.ರೇವಣ್ಣ, ಕೃಷಿ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇದ್ದರೆ ಇಲಾಖೆಯಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ. ಕೃಷಿ ಇಲಾಖೆ ರೈತರಿಗೆ ನೆರವಾಗಬೇಕಾದ ಇಲಾಖೆ. ವಿಳಂಬ ನೀತಿ ಅನುಸರಿಸದೆ ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News