ಸಿದ್ದರಾಮಯ್ಯರನ್ನು ಭೇಟಿಯಾದ ಮಧು ಬಂಗಾರಪ್ಪ: ಎಪ್ರಿಲ್ ನಲ್ಲಿ ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನ
ಬೆಂಗಳೂರು, ಮಾ.11: ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ಧವಾಗಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಗುರುವಾರ ನಗರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸೇರಲು ಮುಂದಾಗಿರುವ ಮಧು ಬಂಗಾರಪ್ಪರನ್ನು ಸಿದ್ದರಾಮಯ್ಯ ಹೂಗುಚ್ಛ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು. ಅಲ್ಲದೆ, ಇಂದಿನಿಂದಲೇ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮಾಡುವ ಕೆಲಸವನ್ನು ಆರಂಭಿಸುವಂತೆ ಸಲಹೆ ನೀಡಿದರು.
ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಕಾಂಗ್ರೆಸ್ ಪಕ್ಷಕ್ಕೆ ಸೇರಲು ಅಧಿಕೃತವಾಗಿ ತೀರ್ಮಾನ ಮಾಡಿದ್ದೇನೆ. ಎಪ್ರಿಲ್ ತಿಂಗಳಲ್ಲಿ ಸೊರಬ ಕ್ಷೇತ್ರದಲ್ಲಿ ದೊಡ್ಡ ಸಮಾವೇಶವನ್ನು ಆಯೋಜಿಸಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಇವತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತೇನೆ ಎಂದರು.
ಸಿದ್ದರಾಮಯ್ಯ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ನಮ್ಮ ತಂದೆಯೂ ಮುಖ್ಯಮಂತ್ರಿಯಾಗಿದ್ದವರು. ಹಿರಿಯರಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚಿಸಿ, ಮಾರ್ಗದರ್ಶನ ಪಡೆದುಕೊಂಡಿದ್ದೇನೆ. ಇಂದಿನಿಂದಲೆ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇನೆ ಎಂದ ಅವರು, ಇದೇ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲ್ಲ ಎಂದರು.
ಜೆಡಿಎಸ್‍ನಲ್ಲಿ ನನ್ನ ಭಾವನೆಗಳಿಗೆ ಬೆಲೆ ಸಿಕ್ಕಿಲ್ಲ ಅಂತ ಈ ಹಿಂದೆಯೇ ಹಲವು ಬಾರಿ ಹೇಳಿದ್ದೇನೆ. ನನ್ನ ಭಾವನೆಗಳಿಗೆ ಸೂಕ್ತವಾದ ವೇದಿಕೆ ಕಾಂಗ್ರೆಸ್. ಕುಮಾರಸ್ವಾಮಿ ಅವರ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವ ಇದೆ. ಆದರೆ, ಈಗಿನ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಆದುದರಿಂದ, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯ ನಸೀರ್ ಅಹ್ಮದ್, ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.