ಇಂಗ್ಲೆಂಡ್ ವಿರುದ್ದ ಮೊದಲ ಟ್ವೆಂಟಿ-20: ಭಾರತ 124/7
ಅಹಮದಾಬಾದ್: ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಭಾರತ ತಂಡ ಶ್ರೇಯಸ್ ಅಯ್ಯರ್(67 ರನ್, 48 ಎಸೆತ, 8 ಬೌಂಡರಿ, 1 ಸಿಕ್ಸರ್) ಏಕಾಂಗಿ ಹೋರಾಟದ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಶುಕ್ರವಾರ ಇಲ್ಲಿ ಆರಂಭವಾದ 5 ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಗಳ ನಷ್ಟಕ್ಕೆ 124 ರನ್ ಗಳಿಸಿದೆ.
ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.
ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಭಾರತವು ಆರಂಭಿಕ ಆಘಾತಕ್ಕೆ ಒಳಗಾಗಿದ್ದು 5 ಓವರ್ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 20 ರನ್ ಗಳಿಸಿತು.
ಅಯ್ಯರ್ ಅಗ್ರ ಸ್ಕೋರರ್ ಎನಿಸಿಕೊಂಡರೆ, ರಿಷಭ್ ಪಂತ್ (21), ಹಾರ್ದಿಕ್ ಪಾಂಡ್ಯ (19)ಎರಡಂಕೆಯ ಸ್ಕೋರ್ ಗಳಿಸಿದರು.
ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್ (4) ಹಾಗೂ ಕನ್ನಡಿಗ ರಾಹುಲ್ (1)ಭಾರತಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾದರು. ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು. ರಾಹುಲ್ ಮೊದಲಿಗೆ ವಿಕೆಟ್ ಒಪ್ಪಿಸಿದರೆ, ಕೊಹ್ಲಿ 3ನೇ ಓವರ್ ನಲ್ಲಿ ವಿಕೆಟ್ ಕೈಚೆಲ್ಲಿದರು.
ಇಂಗ್ಲೆಂಡ್ ಪರ ಜೋಫ್ರಾ ಅರ್ಚರ್(3-23) ಯಶಸ್ವಿ ಬೌಲರ್ ಎನಿಸಿಕೊಂಡರು. ಅದಿಲ್ ರಶೀದ್(1-14), ಮಾರ್ಕ್ ವುಡ್(1-20) ಹಾಗೂ ಕ್ರಿಸ್ ಜೋರ್ಡನ್ (1-27)ತಲಾ ಒಂದು ವಿಕೆಟ್ ಪಡೆದರು.
ಭಾರತ ತಂಡದಲ್ಲಿ 'ಹಿಟ್ ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ ಗಾಯದಿಂದಾಗಿ ದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿದ್ದ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ ಕುಮಾರ್ ಪುನರಾಗಮನ ಮಾಡಿದ್ದಾರೆ.