×
Ad

ಕೋಟ: ಸ್ಥಳೀಯಾಡಳಿತ ಜನಪ್ರತಿನಿಧಿಗಳ ಹೊಳಪು ಕ್ರೀಡಾಕೂಟಕ್ಕೆ ಚಾಲನೆ

Update: 2021-03-13 19:08 IST

ಕೋಟ, ಮಾ.13: ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಆಯೋಜಿಸಲಾದ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಹೊಳಪು-2021’ಕ್ಕೆ ಶನಿವಾರ ಚಾಲನೆ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಶಾಸಕ ರಘುಪತಿ ಭಟ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.

ವಿಧಾನಪರಿಷತ್ ಸದಸ್ಯ ಅಪ್ಪಾಜಿ ಗೌಡ ಸ್ಪರ್ಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಾಸಕ ಯು.ಟಿ ಖಾದರ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ಗೌಡ ಬಲೂನು ಹಾರಿ ಬಿಡುವುದರ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಥ ಸಂಚಲನಕ್ಕೆ ಚಾಲನೆ ನೀಡಿದರು.

ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆನಂದ್ ಸಿ ಕುಂದರ್ ಸ್ವಾಗತಿಸಿದರು. ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಷ್ಟ್ರೀಯ ಮಹಿಳಾ ಅಯೋಗದ ಸದಸ್ಯೆ ಶ್ಯಾಮಲ ಎಸ್ ಕುಂದರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥ ಸಂಚಲನದಲ್ಲಿ ವಿವಿಧ ಸ್ಥಬ್ದಚಿತ್ರಗಳ ಪ್ರದರ್ಶನ, ಯಕ್ಷಗಾನದ ವೇಷಗಳು, ತಟ್ಟಿರಾಯ ವೇಷಗಳು, ಕೊರಗರ ಡೋಲು ವಾದನ, ಕಂಬಳ ಕೋಣಗಳು, ಕಹಳೆ ವಾದನ, ಕೋವಿಡ್ ಕುರಿತು ಜಾಗೃತಿ ಮೂಡಿಸುವ ಸ್ಥಬ್ದಚಿತ್ರ, ಕೋವಿಡ್ ಲಸಿಕೆ ಕುರಿತ ಸ್ಥಬ್ದಚಿತ್ರಗಳು, ಸಾಂಪ್ರದಾಯಿಕ ಧಿರಿಸು ತೊಟ್ಟ ಜನಪ್ರತಿನಿಧಿಗಳ ತಂಡಗಳು ಪಥ ಸಂಚಲನದ ಮೆರುಗನ್ನು ಹೆಚ್ಚಿಸಿದವು.

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಪಂಚಾಯತ್‌ಗಳಿಗೆ ಬಹುಮಾನ ವಿತರಿಸಲಾಯಿತು. ಪಥ ಸಂಚಲನದಲ್ಲಿ ವಿಜೇತ ತಂಡಕ್ಕೆ ಬಹುಮಾನ ನೀಡಲಾಯಿತು.

ಕೊರೋನ ಮಾರ್ಗಸೂಚಿ ಕಡೆಗಣಿಸಿದ ಜನಪ್ರತಿನಿಧಿಗಳು

ದೇಶಾದ್ಯಂತ ಕೊರೋನ ಎರಡನೇ ಅಲೆ ಹಲವು ಸರಕಾರಗಳ ನಿದ್ದೆಗೆಡುವಂತೆ ಮಾಡಿ ರಾಜ್ಯದಲ್ಲೂ ನಿಧಾನವಾಗಿ ಏರುಗತಿ ಯಲ್ಲಿದ್ದರೂ, ಕೋಟದಲ್ಲಿ ಇಂದು ಗ್ರಾಪಂ, ತಾಪಂ, ಜಿಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಸದಸ್ಯರಿಗಾಗಿ ನಡೆದ ಹೊಳಪು-2021 ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಜನಪ್ರತಿನಿಧಿಗಳು ಮಾತ್ರ ರಾಜ್ಯ ಸರಕಾರ ಹೊರಡಿಸಿದ ಕೋವಿಡ್ ಮಾರ್ಗಸೂಚಿಗಳಿಗೆ ಕ್ಯಾರೇ ಅನ್ನಲ್ಲಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸಲು ಬಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತದ ನೂರಾರು ಮಂದಿ ಜನಪ್ರತಿನಿಧಿ ಗಳೊಂದಿಗೆ ಉದ್ಘಾಟನಾ ಸಮಾರಂಭಕ್ಕಾಗಿ ಬಂದ ಗಣ್ಯರು ಕೂಡಾ ಕೋವಿಡ್ ಎದುರಿಸಲು ಕಡ್ಡಾಯವಾಗಿ ಪಾಲಿಸಲೇಬೇಕಾದ ಮಾಸ್ಕ್ ಧಾರಣೆ, ಸಾಮಾಜಿಕ ಅಂತರವನ್ನೇ ಮರೆತು ಭಾಗವಹಿಸಿದರು.

ಕ್ರೀಡಾಕೂಟದಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರೆಂದು ಹೇಳಲಾಗಿದೆ. ಆದರೆ ಇಲ್ಲಿ ಮಾಸ್ಕ್ ಹಾಗೂ ಸ್ಯಾನಟೈಸ್ ಸಂಪೂರ್ಣ ನಾಪತ್ತೆಯಾಗಿತ್ತು. ಮಾರ್ಗಸೂಚಿಯನ್ನು ಗಾಳಿಗೆ ತೂರಿದವರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ ಕುಮಾರ್ ಕಟೀಲ್ ಅವರೂ ಸೇರಿದ್ದರು ಎಂದು ಸ್ಥಳೀಯರು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News