ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಾ.15ಕ್ಕೆ ಸಚಿವರ ಸಭೆ
ಬೆಂಗಳೂರು, ಮಾ. 13: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರ(ಮಾ.15) ವಿಧಾನ ಮಂಡಲ ಅಧಿವೇಶನ ಆರಂಭಕ್ಕೂ ಮೊದಲು ತನ್ನ ಅಧ್ಯಕ್ಷತೆಯಲ್ಲಿ ಸಚಿವರ ಸಭೆ ಕರೆದಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಮಾ.15ರ ಸೋಮವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಸಚಿವರ ಸಭೆ ಕರೆಯಲಾಗಿದ್ದು, ಇದೊಂದು ಅನೌಪಚಾರಿಕ ಸಭೆ ಎಂದು ಹೇಳಲಾಗುತ್ತಿದೆ. ಸಿಡಿ ಪ್ರಕರಣ, ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವರೊಂದಿಗೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾಗಿರುವ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು? ಅಥವಾ ತನಿಖೆ ಬಳಿಕ ರಮೇಶ್ ಜಾರಕಿಹೊಳಿ ಅವರಿಗೆ ನೀಡಬೇಕೇ? ಎಂಬ ಬಗ್ಗೆ ಸಚಿವರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಕೊರೋನ ಎರಡನೆ ಅಲೆ ಆತಂಕ ಸೃಷ್ಟಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಸೋಂಕಿ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಸಂಪುಟ ಸಹೋದ್ಯೋಗಿಗಳ ಜತೆ ಸಿಎಂ ಚರ್ಚಿಸಲಿದ್ದಾರೆಂದು ಗೊತ್ತಾಗಿದೆ.