ಕೋವಿಡ್ ಪ್ರಕರಣ ಹೆಚ್ಚಳ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಾ.15ರಂದು ತಜ್ಞರ ಸಭೆ
ಬೆಂಗಳೂರು, ಮಾ, 14: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೇ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳು, ತಜ್ಞ ವೈದ್ಯರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಅಧ್ಯಕ್ಷತೆಯಲ್ಲಿ ನಾಳೆ(ಮಾ.15) ಸಂಜೆ 5ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಪುಟ ಸಚಿವರು, ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯರು ಮತ್ತು ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೋವಿಡ್ ಸೋಂಕು ನಿಯಂತ್ರಿಸಲು ಮತ್ತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದು, ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಕೋವಿಡ್ ವರದಿ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.