ಮಹಿಳೆ ಕ್ರೀಡಾಯಲ್ಲಿ ಭಾಗವಹಿಸಿ ಸದೃಢವಾಗಲಿ: ಮೀನಾಕ್ಷಿ ಶಾಂತಿಗೋಡು
ಮಂಗಳೂರು, ಮಾ.15: ಮಹಿಳೆ ಕೌಟುಂಬಿಕ ಜವಾಬ್ದಾರಿ ನಿಭಾಯಿಸುವುದರೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕ್ರೀಡಾಕೂಟ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.
ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ರವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಮಾತ್ರ ಸೀಮಿತರಾಗದೇ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಸರಕಾರದಿಂದ ಅನುಷ್ಠ್ಠಾನಗೊಂಡಿರುವ ಹಲವಾರು ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ ಉತ್ತಮ ಶಿಕ್ಷಣವನ್ನು ಪಡೆದು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಮಹಾನಗರಪಾಲಿಕೆ ಸದಸ್ಯೆ ಸಂಧ್ಯಾ ಎಂ. ಆಚಾರ್, ಸಹಾಯಕ ಕ್ರೀಡಾ ಅಧಿಕಾರಿ ವಿನೋದ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.