ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ಆರೋಪ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-03-16 15:06 GMT

ಬೆಂಗಳೂರು, ಮಾ.16: ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಬಿಡುಗಡೆಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಜೈಲು ಅಧೀಕ್ಷಕರಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.

ಶಶಿಕಲಾ ಹಾಗೂ ಅವರ ಸಂಬಂಧಿ ಇಳವರಸಿ ಅವರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಆರೋಪ ಕೇಳಿಬಂದಿತ್ತು. ಅದಕ್ಕಾಗಿ ಜೈಲು ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಹಣ ನೀಡಿದ ಭ್ರಷ್ಟಾಚಾರ ಆರೋಪವೂ ವ್ಯಕ್ತವಾಗಿತ್ತು. ಈ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿ, 295 ಪುಟಗಳ ಮಧ್ಯಂತರ ವರದಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಿಲ್ಲ. ಹೀಗಾಗಿ, ಅಂತಿಮ ವರದಿ ಸಲ್ಲಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News