ಎ.ಜೆ.ಸದಾಶಿವ ಆಯೋಗದ ವರದಿ ಮಂಡನೆಗೆ ಆಗ್ರಹಿಸಿ ಧರಣಿ

Update: 2021-03-16 17:55 GMT

ಬೆಂಗಳೂರು, ಮಾ.16: ನಿವೃತ್ತ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರಕಾರ ಈ ಕೂಡಲೇ ವಿಧಾನಸಭೆಯಲ್ಲಿ ಮಂಡಿಸಬೇಕೆಂದು ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ(ಕರ್ನಾಟಕ) ಸದಸ್ಯರು ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪರಿಶಿಷ್ಟ ಜಾತಿಯ ಒಳ ಪಂಗಡಗಳಿಗೆ ಆಶಾಕಿರಣವಾಗಿರುವ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಆರ್.ಮೋಹನ್‍ರಾಜು, ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಹಲವು ವರ್ಷಗಳಿಂದ ಗಾಂಧಿ ಮಾರ್ಗದಲ್ಲಿಯೇ ಹೋರಾಟ ನಡೆಸಲಾಗುತ್ತಿದೆ. ಆದರೆ, ಸರಕಾರಗಳು ಮಾತ್ರ ಈ ಕುರಿತು ಎಚ್ಚೆತ್ತುಕೊಳ್ಳುತ್ತಿಲ್ಲ. ಅಲ್ಲದೆ, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದಿಂದ ಯಾವುದೇ ಕೆಳವರ್ಗದ ಸಮುದಾಯಗಳಿಗೆ ಧಕ್ಕೆಯಾಗುವುದಿಲ್ಲ ಎಂದರು.

ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಹೆಸರಿನಲ್ಲಿ ಕೆಲವರು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿದ್ದು, ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಠಿಣಕ್ರಮ ಕೈಗೊಳ್ಳಬೇಕು. ಅದೇ ರೀತಿ, ಈಗಾಗಲೇ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿ, ಉದ್ಯೋಗ ಪಡೆದುಕೊಂಡಿರುವ ಸರಕಾರಿ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆದಾರರ ವಿರುದ್ಧವೂ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ರಾಜು ಎಂ.ತಳವಾರ್, ಶೇಖರ್ ಹಾವಂಜೆ, ಜಿ.ಶಿವಕುಮಾರ್, ಹುಸೇನಪ್ಪ ಹಂಜಿನಾಳ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News