×
Ad

​ಪೋಷಣ್ ಅಭಿಯಾನದಿಂದ ಅಪೌಷ್ಟಿಕತೆ ದೂರ: ಸಿಇಓ ಡಾ.ನವೀನ್ ಭಟ್

Update: 2021-03-18 19:04 IST

ಉಡುಪಿ, ಮಾ.18: ಅಂಗನವಾಡಿ ಕೇಂದ್ರಗಳಲ್ಲಿ ಗುರುತಿಸಲ್ಪಟ್ಟ ತೀವ್ರ ಅಪೌಷ್ಠಿಕ ಹಾಗೂ ಸಾಧಾರಣ ಅಪೌಷ್ಠಿಕ ಮಕ್ಕಳನ್ನು ಪಂಚಾಯತ್ ಮಟ್ಟದಲ್ಲಿ ದತ್ತು ಪಡೆದು ಅವರ ಪೌಷ್ಠಿಕತೆ ಮಟ್ಟವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾದರೆ, ಪೋಷಣ್ ಅಭಿಯಾನ ಯೋಜನೆಯ ಮುಖ್ಯ ಉದ್ದೇಶವಾದ ಅಪೌಷ್ಠಿಕತೆಯನ್ನು ಹೋಗಲಾಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದ್ದಾರೆ.

ಬಡಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಅಭಿಯಾನ್ ಯೋಜನೆಯ ‘ಪೋಷಣ್ ಪಕ್ವಾಡ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಸರಕಾರ ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂಗನವಾಡಿಗಳ ಮೂಲಕ ಸಂಬಂಧಿತರನ್ನು ತಲುಪಲಾಗುತ್ತಿದೆ. ಇದು ಶೇ.100ರಷ್ಟು ಅನುಷ್ಟಾನಗೊಂಡಾಗ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್ ಶೇಷಪ್ಪ, ಬಡಗಬೆಟ್ಟು ಗ್ರಾಪಂ ಉಪಾಧ್ಯಕ್ಷೆ ನಿರುಪಮಾ ಎಸ್ ಹೆಗ್ಡೆ, ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ಬಾಬು, ಉಪ ಯೋಜನಾ ನಿರ್ದೇಶಕ ಗುರುದತ್ ಮುಂತಾದವರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೇಶವ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News