ಮಹಿಳೆಯರಿಗೆ ಸೌಲಭ್ಯ ಕಲ್ಪಿಸದ ಕಾರ್ಖಾನೆಗಳಿಗೆ ನೋಟಿಸ್: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

Update: 2021-03-18 14:50 GMT

ಬೆಂಗಳೂರು, ಮಾ. 18: ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಮಹಿಳಾ ಕಾರ್ಮಿಕರಿಗೆ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ ಸಹಿತ ಸೂಕ್ತ ಸೌಲಭ್ಯ ಕಲ್ಪಿಸದ 396 ಗಾರ್ಮೆಂಟ್ಸ್ ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಬಿ.ಸಿ.ನಾಗೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳಾ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕನಿಷ್ಠ ನೀಡಬೇಕಾದ ಸೌಲಭ್ಯಗಳನ್ನು ನೀಡದಿರುವ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ಕುಳಿತು ಕೆಲಸ ನಿರ್ವಹಿಸಲು ಆಸನದ ವ್ಯವಸ್ಥೆ, ಗಾಳಿ, ಬೆಳಕು, ತುರ್ತು ನಿರ್ಗಮನ, ಪ್ರಥಮ ಚಿಕಿತ್ಸೆ ಸೌಲಭ್ಯ, 6 ವರ್ಷದ ಮಕ್ಕಳಿಗೆ ಬಾಲವಾಡಿ, ವಿಶ್ರಾಂತಿ ಕೊಠಡಿ, ಕ್ಯಾಂಟೀನ್, ಆಂಬ್ಯುಲೆನ್ಸ್, ಸುರಕ್ಷತಾ ಅಧಿಕಾರಿ, ವೇತನ ಸಹಿತ ರಜೆ ಸೇರಿದಂತೆ ಹಲವು ನಿಯಮಗಳಿವೆ.

ಮಹಿಳೆಯರಿಗೆ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಸುರಕ್ಷತೆ ಒದಗಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಿ ವಿಧಾನ ಮಂಡಲದಲ್ಲಿ ಅಂಗೀಕರಿಸಲಾಗಿದೆ. ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. ಕಾರ್ಮಿಕ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮೋದನೆ ನೀಡಿದ ಕೂಡಲೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News