ಐಎಂಎ ಬಹುಕೋಟಿ ವಂಚನೆ ಪ್ರಕರಣ: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧದ ಚಾರ್ಜ್‌ಶೀಟ್ ರದ್ದು
ಬೆಂಗಳೂರು, ಮಾ.19: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೇಮಂತ್ ನಿಂಬಾಳ್ಕರ್ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶುಕ್ರವಾರ ಚಾರ್ಜ್‌ಶೀಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪೂರ್ವಾನುಮತಿ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಪ್ರಕರಣವೇನು: ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪಾತ್ರವಿದ್ದು, ತನಿಖೆ ನಡೆಸಲು ಅನುಮತಿ ಕೋರಿ ಸಿಬಿಐ ಸರಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಸರಕಾರ 2020ರ ಸೆ.9ರಂದು ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿ ವಿಶೇಷ ನ್ಯಾಯಾಲಯಕ್ಕೆ ಎಫ್‍ಐಆರ್ ಸಲ್ಲಿಸಿದ್ದರು.
ಐಎಂಎ ವಂಚನೆ ಹಗರಣದ ಸಂಬಂಧ ದೂರುಗಳು ದಾಖಲಾಗುವ ಸಂದರ್ಭದಲ್ಲಿ ಸಿಐಡಿಯ ಆರ್ಥಿಕ ಅಪರಾಧ ತನಿಖಾ ವಿಭಾಗದ ಮುಖ್ಯಸ್ಥರಾಗಿ (ಐಜಿಪಿ) ಹೇಮಂತ್ ನಿಂಬಾಳ್ಕರ್ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ, ನಿಂಬಾಳ್ಕರ್ ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ. ಜತೆಗೆ, ಆರೋಪಿಗಳಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ನಿಂಬಾಳ್ಕರ್, ಸಿಬಿಐ ದಾಖಲಿಸಿರುವ ಎಫ್‍ಐಆರ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿದ್ದರು.