ರೋಷನ್ ಬೇಗ್ ಆಸ್ತಿ ಮುಟ್ಟುಗೋಲಿಗೆ ತಕ್ಷಣವೇ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2021-03-19 12:52 GMT

ಬೆಂಗಳೂರು, ಮಾ.19: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿನ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಯಾವುದೇ ಕ್ರಮ ಜರುಗಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದೆ. ಕೆಪಿಐಡಿ ಕಾಯ್ದೆಯಡಿ ಆಸ್ತಿ ಮುಟ್ಟುಗೋಲಿಗೆ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದು ಹೈಕೋರ್ಟ್ ತಿಳಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣೆ ಮಾಡುವ ನಿಟ್ಟಿನಲ್ಲಿ ಸರಕಾರ ಆಸ್ತಿ ಮುಟ್ಟುಗೋಲಿಗೆ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದೆ.

ಸರಕಾರದ ಪರ ವಾದಿಸಿದ ವಕೀಲರು, ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಕೆಲ ಮಾಹಿತಿಗಳನ್ನು ಕೇಳಲಾಗಿದೆ ಎಂದರು. ಜತೆಗೆ ಈ ಸಂಬಂಧ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಸಿದ್ಧಪಡಿಸಿದ್ದ ಅನುಪಾಲನಾ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಇಂಥ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರಕಾರಕ್ಕೆ ಎಲ್ಲ ಅಧಿಕಾರವಿದೆ. ಸಿಬಿಐ ವರದಿ ನೀಡುವವರೆಗೆ ಕಾಯುವ ಅಗತ್ಯವಿಲ್ಲ. ಸರಕಾರ ವರದಿ ಬರಬೇಕೆಂದು ಸಮಯ ಕಳೆಯುತ್ತಾ ಕೂತರೆ ಆಸ್ತಿಯೇ ಇಲ್ಲವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆಯನ್ನು ಮುಂದೂಡಿತು.

ಸಿಬಿಐನಿಂದ ಮಾಹಿತಿ ಕೇಳಿದ್ದೇವೆ

ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಕೆಲ ಮಾಹಿತಿಗಳನ್ನು ಕೇಳಲಾಗಿದೆ ಎಂದು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News