ಮಾ.22ರಂದು ರೈತ ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ 'ವಿಧಾನಸೌಧ ಚಲೋ'

Update: 2021-03-19 15:52 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.19: ಕೇಂದ್ರ ಸರಕಾರದ ಕೃಷಿ ವಿರೋಧಿ ಕಾಯ್ದೆಗಳನ್ನು ಖಂಡಿಸಿ ರಾಜ್ಯದೆಲ್ಲೆಡೆ ನಿರಂತರ ರೈತ ಚಳವಳಿ ನಡೆಸಲು ನಿರ್ಧರಿಸಲಾಗಿದ್ದು, ಇದರ ಭಾಗವಾಗಿ ರೈತ ನಾಯಕ ರಾಕೇಶ್ ಸಿಂಗ್ ಟಿಕಾಯತ್ ನೇತೃತ್ವದಲ್ಲಿ ಮಾ.22ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಾಗುವುದು ಎಂದು ಸಂಯುಕ್ತ ಹೋರಾಟ-ಕರ್ನಾಟಕದ ಸಂಯೋಜಕ ಜಿ.ಸಿ.ಬಯ್ಯಾರೆಡ್ಡಿ ಹೇಳಿದರು.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರರಾಜಧಾನಿ ಹೊಸದಿಲ್ಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲೇ ರಾಜ್ಯದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ, ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ ಮತ್ತು ಮಹಿಳೆಯರ ಜ್ವಲಂತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮಾ.22ರಂದು ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಾ.22ರ ಬೆಳಗ್ಗೆ 10 ಗಂಟೆಗೆ ನಗರ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬಳಿಕ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊಸದಿಲ್ಲಿಯ ರೈತ ಹೋರಾಟದ ರೂವಾರಿಗಳಾದ ರಾಕೇಶ್ ಸಿಂಗ್ ಟಿಕಾಯತ್, ದರ್ಶನ್ ಪಾಲ್, ಯದುವೀರ್ ಸಿಂಗ್ ಭಾಗವಹಿಸಲಿದ್ದಾರೆ. ಜತೆಗೆ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಒಟ್ಟು 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ದೇಶದಲ್ಲಿ ರೈತರು ಮತ್ತು ಬಡವರು ಹಿಂದೆಂದಿಗಿಂತಲೂ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್‍ನಿಂದಾಗಿ ಇಡೀ ದೇಶವೇ ತತ್ತರಿಸಿದ್ದ ಸಮಯದಲ್ಲಿ ಸರಕಾರವು ಜನರ ಕಷ್ಟಗಳಿಗೆ ಸ್ಪಂದಿಸಲಿಲ್ಲ. ಬದಲಾಗಿ ಅವರ ಸಂಕಷ್ಟ ಹೆಚ್ಚಿಸುವಂತಹ ನೀತಿಗಳನ್ನು ಜಾರಿಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಮಾತನಾಡಿ, ಕೃಷಿ ಪಂಪ್‍ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಬ್ಸಿಡಿಗಳನ್ನು ತೆಗೆದುಹಾಕುವ ಹುನ್ನಾರವೂ ಇದರಲ್ಲಿ ಅಡಗಿದೆ. ಇದನ್ನು ರಾಜ್ಯ ಸರಕಾರ ವಿರೋಧಿಸಬೇಕು.ಜತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಪದ್ಧತಿಯನ್ನು ಶಾಸನಾತ್ಮಕಗೊಳಿಸಬೇಕು. ಜೊತೆಗೆ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಚಿಂತಕ ನೂರ್ ಶ್ರೀಧರ್ ಮಾತನಾಡಿ, ಹೊಸದಿಲ್ಲಿ ಗಡಿಭಾಗದಲ್ಲಿ ನಡೆಸುತ್ತಿರುವ ಹೋರಾಟದ ಕಾವು ಈಗ ದೇಶದೆಲ್ಲೆಡೆ ವ್ಯಾಪಿಸುತ್ತಿದೆ. ಇನ್ನು, ಮಾ.22ರ ಸಮಾವೇಶದ ನಂತರ ಮುಂದಿನ ಹೋರಾಟದ ರೂಪುರೇಷೆ ತಯಾರಿಸಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡ ಭೈರೇಗೌಡ, ಗೋಪಾಲ್, ಕೆ.ವಿ.ಭಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News