ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ತಡೆ ಆದೇಶ ಹಿಂದಕ್ಕೆ ಪಡೆಯಲು ಎಸ್‌ಡಿಪಿಐ ಒತ್ತಾಯ
ಮಂಗಳೂರು, ಮಾ. 20: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ದೀರ್ಘಕಾಲದ ಮೂತ್ರಪಿಂಡದ ಖಾಯಿಲೆಯ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇದರಿಂದ ಹಲವಾರು ರೋಗಿಗಳಿಗೆ ಪ್ರಯೋಜವಾಗುತ್ತಿತ್ತು. ಆದರೆ, ಇದೀಗ ಸರಕಾರ ದಿಢೀರ್ ಆಗಿ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶಿಸಿದ್ದರಿಂದ ರೋಗಿಗಳಿಗೆ ಸಮಸ್ಯೆಯಾಗಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ಸ್ಥಗಿತದ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.
ಎಸ್‌ಡಿಪಿಐ ದ.ಕ.ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ದ.ಕ.ಜಿಲ್ಲೆಯು ಹೆಲ್ತ್ ಹಬ್ ಆಗಿದೆ. ನೆರೆಯ ರಾಜ್ಯ ಮತ್ತು ಜಿಲ್ಲೆಗಳಿಂದ ಸಾವಿರಾರು ಮಂದಿ ರೋಗಿಗಳು ಮಂಗಳೂರಿಗೆ ಆರೋಗ್ಯ ಸಮಸ್ಯೆಗೆ ಸಂಬಂಧಿಸಿ ಆಗಮಿಸುತ್ತಿದ್ದಾರೆ. ಅದರಲ್ಲೂ ಮೂತ್ರಪಿಂಡ ಸಮಸ್ಯೆ ಉಲ್ಬಣಿಸಿದ ರೋಗಿಗಳು ವಾರಕ್ಕೆ ಎರಡ್ಮೂರು ಬಾರಿ ನಿರಂತರವಾಗಿ ಡಯಾಲಿಸಿಸ್‌ಗೆ ಬರುತ್ತಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ 12 ಡಯಾಲಿಸಿಸ್ ಯಂತ್ರಗಳು ಕಾರ್ಯಾಚರಿಸುತ್ತಿದ್ದಾರೆ. ಇದರಿಂದ ಗರಿಷ್ಠ 45 ರೋಗಿಗಳು ಮಾತ್ರ ಡಯಾಲಿಸಿಸ್ ಮಾಡಬಹುದಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಲು ಅವಕಾಶ ನಿರಾಕರಿಸಿದ ಕಾರಣ ಸಮಸ್ಯೆ ಬಿಗಡಾಯಿಸಿದೆ. ಕಿಡ್ನಿ ವೈಫಲ್ಯದ ರೋಗಿಗಳಿಗೆ ಕೊರೋನ ಭಾದಿಸುತ್ತಿದ್ದು, ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಅಲ್ಲದೆ ಕನಿಷ್ಠ 6 ತಿಂಗಳು ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಕನಿಷ್ಟ 50 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರ ಬಡ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆಯನ್ನು ನೀಡಬೇಕು. ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 8 ಯಂತ್ರಗಳನ್ನು ಅಳವಡಿಸಬೇಕು. ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಡಯಾಲಿಸಿಸ್ ಸೌಲಭ್ಯ ಕಲ್ಪಿಸಬೇಕು ಎಂದು ಅಥಾವುಲ್ಲಾ ಜೋಕಟ್ಟೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಉಪಸ್ಥಿತರಿದ್ದರು.