ಕೊರೋನ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ?: ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಹೀಗೆ...

Update: 2021-03-21 12:22 GMT

ಧಾರವಾಡ, ಮಾ. 21: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳ ಹೆಚ್ಚಳ ಹಿನ್ನೆಲೆ ಮತ್ತೆ ಲಾಕ್‍ಡೌನ್ ಘೋಷಿಸುವ ಸಂಬಂಧ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. 

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಿಸಲು ಪರಿಣಿತರ ಸಮಿತಿ ಲಾಕ್‍ಡೌನ್ ಘೋಷಣೆಗೆ ಶಿಫಾರಸು ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಕೋವಿಡ್ ಎರಡನೆ ಅಲೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಸಂಬಂಧ ತಜ್ಞ ವೈದ್ಯರ ಸಮಿತಿಯ ಶಿಫಾರಸ್ಸಿನ್ನು ಆಧರಿಸಿ ಆರೋಗ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಮಾಡಲಾಗುವುದು ಎಂದು ಅವರು ತಿಳಿಸಿದರು.

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಲಾಕ್‍ಡೌನ್ ಘೋಷಣೆ ಮಾಡುವ ಸಂಬಂಧ ಆಯಾ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಅವರು ನಿರ್ಧಾರ ಮಾಡಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News