ಅಲ್ಪಸಂಖ್ಯಾತ ಇಂಜಿನಿಯರಿಂಗ್ ಕಾಲೇಜಿನಲ್ಲಿ 35 ಶೇ. ಮಾತ್ರ ಅಲ್ಪಸಂಖ್ಯಾತ ವಿದ್ಯಾರ್ಥಿಗಳು: ಸರಕಾರ
ಹೊಸದಿಲ್ಲಿ, ಮಾ.23: ಅಲ್ಪಸಂಖ್ಯಾತ ಇಂಜಿನಿಯರಿಂಗ್ ಸಂಸ್ಥೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಲ್ಲಿ ಕೇವಲ 35 ಶೇ. ವಿದ್ಯಾರ್ಥಿಗಳು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಸಮುದಾಯದವರು ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಆಯೋಗ(ಎನ್‌ಸಿಎಂಇಐ)ವು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಿದ 83 ಇಂಜಿನಿಯರಿಂಗ್ ಸಂಸ್ಥೆಗಳಲ್ಲಿ ದಾಖಲಾಗಿರುವ 17,212 ವಿದ್ಯಾರ್ಥಿಗಳಲ್ಲಿ ಕೇವಲ 6,046 ವಿದ್ಯಾರ್ಥಿಗಳು ಮಾತ್ರ ಅಲ್ಪಸಂಖ್ಯಾತ ಸಮುದಾಯದವರು ಎಂದು ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ರಾಕೇಶ್ ಸಿನ್ಹಾ ಕೇಳಿದ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯ ತಿಳಿಸಿದೆ.
ಈ 83 ಸಂಸ್ಥೆಗಳಲ್ಲಿ 32,862 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶವಿದ್ದರೂ ಈಗ ಕೇವಲ 17,212 ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರದ ವಿದ್ಯಾರ್ಥಿಗಳನ್ನೂ ದಾಖಲಾತಿ ಮಾಡಿಕೊಳ್ಳಬಹುದು. ಇದಕ್ಕೆ ಯಾವುದೇ ಗರಿಷ್ಠ ಪರಿಮಿತಿಯಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರ ಇಲಾಖೆಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಅಖಿಲಭಾರತ ತಾಂತ್ರಿಕ ಶಿಕ್ಷಣ ಸಮಿತಿ(ಎಐಸಿಟಿಇ) ಒದಗಿಸಿದ ಅಂಕಿಅಂಶವನ್ನು ಆಧರಿಸಿ ಈ ಉತ್ತರ ನೀಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಈ ಅಂಕಿಅಂಶ ಪಕ್ಷಪಾತವನ್ನು ತೋರಿಸುತ್ತಿಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇತರ ಸಂಸ್ಥೆಗಳಲ್ಲಿ(ಅಲ್ಪಸಂಖ್ಯಾತರಲ್ಲದವರ ಶಿಕ್ಷಣ ಸಂಸ್ಥೆ) ದಾಖಲಾಗಲು ಆಯ್ಕೆ ಮಾಡಿಕೊಂಡರೆ ಅವರನ್ನು ತಡೆಯುವಂತಿಲ್ಲ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲೇ ಅಧ್ಯಯನ ಮಾಡಬೇಕು ಎಂದು ಅವರನ್ನು ಬಲವಂತಗೊಳಿಸುವಂತಿಲ್ಲ ಎಂದು ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದ್ದಾರೆ. ಅಲ್ಪಸಂಖ್ಯಾತ ವಿಭಾಗದಲ್ಲಿ ಇಂಜಿನಿಯರಿಂಗ್ ಕಾಲೇಜು ಆರಂಭಿಸಲು ಬಯಸುವ ಸಂಸ್ಥೆಗಳು ಎಐಸಿಟಿಇ ನಿಯಮಗಳನ್ನು ಪಾಲಿಸಬೇಕು ಮತ್ತು ಸಂಬಂಧಿಸಿದ ರಾಜ್ಯ/ಕೇಂದ್ರಾಡಳಿತ ಪ್ರದೇಶ ಆಡಳಿತದ ಅನುಮತಿ ಪಡೆಯಬೇಕು ಅಥವಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಆಯೋಗವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳೆಂದು ಘೋಷಿಸಿರಬೇಕು. 2016ರ ಎನ್‌ಸಿಎಂಇಐ ಕಾಯ್ದೆ ಪ್ರಕಾರ, ಇಂತಹ ಕಾಲೇಜುಗಳು ತನ್ನದೇ ಸಮುದಾಯದ ಯಾವುದೇ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವ ಅಧಿಕಾರ ಹೊಂದಿದೆ. ಅಲ್ಪಸಂಖ್ಯಾತರಲ್ಲದ ವಿದ್ಯಾರ್ಥಿಗಳು ದಾಖಲಾತಿ ಪಡೆಯಲು ಬಲವಂತ ಮಾಡುವಂತಿಲ್ಲ.