ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಶುಕ್ರವಾರ 'ಭಾರತ್ ಬಂದ್'

Update: 2021-03-25 14:28 GMT

ಬೆಂಗಳೂರು, ಮಾ.25: ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ನೀತಿಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಕಳೆದ ನಾಲ್ಕು ತಿಂಗಳಿಂದ ಹೊಸದಿಲ್ಲಿ ಸೇರಿದಂತೆ ದೇಶಾದ್ಯಂತ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು, ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ನಾಳೆ(ಮಾ.26) ಭಾರತ್ ಬಂದ್‍ಗೆ ಕರೆ ನೀಡಿವೆ.

ದೇಶಾದ್ಯಂತ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ನಾಳೆಗೆ ನಾಲ್ಕು ತಿಂಗಳು ಆಗಲಿದ್ದು, ಇದರ ಅಂಗವಾಗಿ ರಾಷ್ಟ್ರೀಯ ಸಂಯುಕ್ತ ಕಿಸಾನ್‍ ಮೋರ್ಚ ವತಿಯಿಂದ ನಾಳೆ 'ಭಾರತ್ ಬಂದ್' ಕರೆ ನೀಡಿದೆ. ಇದಕ್ಕೆ ರಾಜ್ಯದ ರೈತ ಸಂಘಟನೆಗಳು ಬೆಂಬಲಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಈ ಕುರಿತು ಮಾಹಿತಿ ನೀಡಿದ ರೈತ ನಾಯಕ ಬಡಗಲಪುರ ನಾಗೇಂದ್ರ, ಭಾರತ್ ಬಂದ್ ಪ್ರಯುಕ್ತ ನಾಳೆ(ಮಾ.26) ಟೌನ್‍ಹಾಲ್‍ನಿಂದ ಮೈಸೂರ್ ಬ್ಯಾಂಕ್ ವೃತ್ತದವರೆಗೆ ನೂತನ ಕೃಷಿ ಕಾಯ್ದೆಗಳ ಶವಯಾತ್ರೆ ನಡೆಸಲು ಉದ್ದೇಶಿಸಿದ್ದು, ನಾಯಂಡಹಳ್ಳಿ ಸುತ್ತಮುತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿದೆ. ಅವುಗಳನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅವರಿಗೆ ಬೆಂಬಲವಾಗಿ ರಾಜ್ಯ ರೈತ ಸಂಘಟನೆಗಳು ನಿಲ್ಲಲ್ಲಿವೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕೇಂದ್ರ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ರೈತ ಸಂಘಟನೆಗಳು ಬೆಂಬಲಿಸುತ್ತಾ ಬಂದಿವೆ. ಅದರ ಮುಂದುವರೆದ ಭಾಗವಾಗಿ ನಾಳೆ ನಡೆಯುವ ಭಾರತ್ ಬಂದ್ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ 'ಶವಯಾತ್ರೆ' ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಬೆಂಬಲ: ನೂತನ ಕೃಷಿ ನೀತಿಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ನಾಳೆ(ಮಾ.26) ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲಿಸಲಿದೆ  ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಾಟಾಳ್ ಬೆಂಬಲ

ಕೇಂದ್ರದ ನೂತನ ಕೃಷಿ ಕಾಯ್ದೆ ವಿರೋಧಿಸಿ ನಾಳೆ(ಮಾ.26) ನಡೆಯುತ್ತಿರುವ ಭಾರತ್ ಬಂದ್‍ಗೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಬಂದ್ ಪ್ರಯುಕ್ತ ಮೆಜೆಸ್ಟಿಕ್‍ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಾ.26ರಂದು ಬೆಳಗ್ಗೆ 11.30ಕ್ಕೆ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತ ನಾಯಕರ ವಿರುದ್ಧ ಕೇಂದ್ರ ಸರಕಾರ ಪ್ರಕರಣಗಳನ್ನು ದಾಖಲಿಸಿ ಬೆದರಿಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ದೇಶದ ಪ್ರತಿಯೊಬ್ಬ ಪ್ರಜೆಗೆ ತನ್ನ ಅನಿಸಿಕೆಯನ್ನು ಸಂವಿಧಾನದಡಿ ಪ್ರಶ್ನಿಸುವ, ಹೋರಾಟ ಮಾಡುವ ಹಕ್ಕಿದೆ. ಇದನ್ನು ಬಿಜೆಪಿ ಸರಕಾರ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News