ಕೋವಿಡ್ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಶಬೇ ಬರಾಅತ್, ಯುಗಾದಿ, ಗುಡ್‍ಫ್ರೈಡೆ ಸಾರ್ವಜನಿಕ ಆಚರಣೆಗೆ ನಿಷೇಧ
ಬೆಂಗಳೂರು, ಮಾ.25: ಕೋವಿಡ್ ಎರಡನೆ ಅಲೆಯ ಪರಿಣಾಮ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ. ಈ ಹಿನ್ನೆಲೆಯಲ್ಲಿ ಯುಗಾದಿ, ಹೋಳಿ, ಶಬೇ ಬರಾಅತ್, ಗುಡ್ ಫ್ರೈಡೆ ಹಬ್ಬಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡದಂತೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು, ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ. ಆದೇಶವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ. ಹೀಗಾಗಿ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವುದು ಸಾಮಾನ್ಯ. ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಹಬ್ಬಗಳಂದು ಸಾರ್ವಜನಿಕವಾಗಿ ಗುಂಪುಗೂಡುವಿಕೆಯನ್ನು ನಿರ್ಬಂಧಿಸಲಾಗಿದೆ.
ಹೊಸದಾಗಿ ಜಾರಿಗೆ ತಂದಿರುವ ಪರಿಷ್ಕೃತ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ.