ಬೆಳಗಾವಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ
Update: 2021-03-26 13:56 IST
ಬೆಂಗಳೂರು, ಮಾ. 26: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಪ್ರಕಟಿಸಿದೆ.
ಶುಕ್ರವಾರ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ನೇಮಿಸಲು ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಚುನಾವಣಾ ಸಮಿತಿ ಉಸ್ತುವಾರಿ ಮುಕುಲ್ ವಾಸ್ನಿಕ್ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ಮಾ.30ಕ್ಕೆ ಕೊನೆಯ ದಿನ. ಮಾ.31ಕ್ಕೆ ನಾಮಪತ್ರ ಪರಿಶೀಲನೆ, ಎ.3ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.