ಮೈಸೂರು : ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

Update: 2021-03-26 08:57 GMT

ಮೈಸೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯ ಅಂಗವಾಗಿ ಇಂದು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಮೈಸೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.

ನಗರದ ಗನ್ ಹೌಸ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ  ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವರ ಪ್ರತಿಕೃತಿ ಮಾಡಿ ಅಣಕು ಶವ ಯಾತ್ರೆ ನಡಸಿದರು.

ಇದೇ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಇಡೀ ರೈತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ 5 ವರ್ಷ ಅಧಿಕಾರ ನಡೆಸಿ ರೈತರ ಬದುಕನ್ನು ನಾಶ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗನ್ ಹೌಸ್ ವೃತ್ತದಿಂದ ಹೊರಟ ಮೆರವಣಿಗೆ ಬೆಂಗಳೂರು ರಸ್ತೆ, ಪುರಭವನ ದ ಮೂಲಕ ಗಾಂಧಿ ವೃತ್ತ ತಲುಪಿ ಮೂರು ಅಣಕು ಶವವನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ, ಪುನೀತ್, ಸಿಐಟಿಯು ನ ಚಂದ್ರಶೇಖರ ಮೇಟಿ, ಉಮಾದೇವಿ, ಸೀಮಾ, ಸಂಧ್ಯಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್, ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಕೆ.ವಿ.ದೇವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News