×
Ad

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಹಿನ್ನೆಲೆ: ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪರೀಕ್ಷೆ ಹೆಚ್ಚಳ

Update: 2021-03-26 19:28 IST

ಬೆಂಗಳೂರು, ಮಾ.26: ಕಳೆದ ಒಂದು ವಾರದಿಂದ ಕೋವಿಡ್ ಎರಡನೇ ಅಲೆಯ ಪರಿಣಾಮ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಬಸ್ ನಿಲ್ದಾಣಗಳು, ರೈಲ್ವೆ ಸ್ಟೇಷನ್ ಸೇರಿದಂತೆ ಜನಸಂದಣಿ ಸೇರುವ ಕಡೆಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ನಗರದ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಬನಶಂಕರಿ, ರೈಲ್ವೆ ನಿಲ್ದಾಣ ಸೇರಿದಂತೆ ನಗರದ ವಿವಿಧೆಡೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಿದ್ದು, ಕೆಲವರು ಸ್ವಯಂಪ್ರೇರಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟರೆ, ಕೆಲವರನ್ನು ಆರೋಗ್ಯ ಸಿಬ್ಬಂದಿಗಳು ಮನವೊಲಿಸಿ ಕೋವಿಡ್ ಪರೀಕ್ಷೆಗಳನ್ನು ಮಾಡಿಸುತ್ತಿದ್ದಾರೆ.

ಹೊರಜಿಲ್ಲೆ, ಹೊರರಾಜ್ಯಗಳಿಂದ ನಗರದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಇಳಿಯುವವರ ಮೇಲೆ ಆರೋಗ್ಯ ಸಿಬ್ಬಂದಿ ನಿಗಾವಹಿಸಿದ್ದು, ಮುಖ್ಯವಾಗಿ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಮನವೊಲಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಗೆ ಒಳಗಾಗುವವರ ವಿಳಾಸ ಸಂಗ್ರಹಿಸಿ ಪರೀಕ್ಷಾ ವರದಿ ಪಾಸಿಟಿವ್ ಬಂದರೆ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಲಾಗುವುದು ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿ ಶಾಲೆಯಲ್ಲಿ ಕೋವಿಡ್ ಪ್ರಕರಣ

ನಗರದ ಜೋಗುಪಾಳ್ಯ ಬಾಲಕರ ಶಾಲೆಯ 9 ವಿದ್ಯಾರ್ಥಿಗಳಿಗೆ, ಹೇರೋಹಳ್ಳಿ ಬಿಬಿಎಂಪಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ, ಆಸ್ಟೀನ್‍ಟೌನ್ ಶಾಲೆಯ ಇಬ್ಬರು ಹಾಗೂ ಕಾಟನ್‍ಪೇಟೆಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಹಲವು ಶಾಲೆಗಳಲ್ಲಿ ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಸೋಂಕು ಕಾಣಿಸಿಕೊಂಡಿರುವ ಶಾಲೆಗಳಿಗೆ ರಜೆ ನೀಡಿ, ಸ್ಯಾನಿಟೈಸರ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡಿರುವ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‍ಗೆ ಒಳಪಡಿಸಲು ತೀರ್ಮಾನಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಪರೀಕ್ಷೆ: ಪದವಿ ಪೂರ್ವ, ಪ್ರೌಢಶಾಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ಪ್ರತಿದಿನ ಒಂದು ಪದವಿ ಪೂರ್ವ ಕಾಲೇಜು, ಒಂದು ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಸಲು ಸಿಬ್ಬಂದಿ ಸಜ್ಜಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News