×
Ad

ಮೈಸೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಹಾ ಪಂಚಾಯತ್: ಬಡಗಲಪುರ ನಾಗೇಂದ್ರ

Update: 2021-03-26 23:06 IST

ಮೈಸೂರು,ಮಾ.26: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯ ಅಂಗವಾಗಿ ಇಂದು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ಮೈಸೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಗನ್ ಹೌಸ್ ವೃತ್ತದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರಧಾನಿ ನರದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ತೋಮರ್ ಪ್ರತಿಕೃತಿ ಮಾಡಿ ಅಣಕು ಶವ ಯಾತ್ರೆ ನಡಸಿ ನಂತರ ದಹಿಸಲಾಯಿತು.

ಇದೇ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಇಡೀ ರೈತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ 5 ವರ್ಷ ಅಧಿಕಾರ ನಡೆಸಿ ರೈತರ ಬದುಕನ್ನು ನಾಶ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ನಾಲ್ಕು ತಿಂಗಳುಗಳಿಂದಲೂ ಈ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಮೂರು ಕೃಷಿ ಕಾಯ್ದೆ ಈಗಾಗಲೇ ಸತ್ತುಹೋಗಿದೆ. ಅದರ ಡೆತ್ ಸರ್ಟಿಫಿಕೇಟ್ ನೀಡಿ ಎಂದು ಕೇಳುತ್ತಿದ್ದೇವೆ ಎಂದರು.

ಮೈಸೂರಿನಲ್ಲಿಯೂ ಮಹಾಪಂಚಾಯತ್ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲಿಯೇ ಸಭೆ ಸೇರಿ ದಿನಾಂಕವನ್ನು ನಿಗದಿಪಡಿಸಲಾಗುವುದು. ಮೈಸೂರು ಜೊತೆಗೆ ರಾಯಚೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಹಾಪಂಚಾಯತ್ ನಡೆಸುವಂತೆ ಬೇಡಿಕೆ ಇದ್ದು ಅಲ್ಲಿಯೂ ಸಹ ನಡೆಸಲಾಗುವುದು ಎಂದು ಹೇಳಿದರು.

ಗನ್ ಹೌಸ್ ವೃತ್ತದಿಂದ ಹೊರಟ ಮೆರವಣಿಗೆ ಬೆಂಗಳೂರು ರಸ್ತೆ, ಪುರಭವನದ ಮೂಲಕ ಗಾಂಧಿ ವೃತ್ತ ತಲುಪಿ ಮೂರು ಅಣಕು ಶವವನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಐಕ್ಯ ಹೋರಾಟ ಸಮಿತಿ ವತಿಯಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ರೈತರ ಬದುಕನ್ನು ನಾಶ ಮಾಡಲು ಕೇಂದ್ರ ಸರ್ಕಾರ ಹೊರಟಿದ್ದು, ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡುವ ಮೂಲಕ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ, ಪುನೀತ್, ಸಿಐಟಿಯು ನ ಚಂದ್ರಶೇಖರ ಮೇಟಿ, ಉಮಾದೇವಿ, ಸೀಮಾ, ಸಂಧ್ಯಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್, ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಕೆ.ವಿ.ದೇವೇಂದ್ರ, ಕಲ್ಲಹಳ್ಳೀ ಕುಮಾರ್, ಅತ್ತಹಳ್ಳೀ ದೇವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News