ರಮೇಶ್ ಜಾರಕಿಹೊಳಿ ನಿವಾಸಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ: ಕ್ಷಮೆಯಾಚನೆಗೆ ಪಟ್ಟು
Update: 2021-03-27 21:45 IST
ಬೆಂಗಳೂರು, ಮಾ. 27: ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಇಲ್ಲಿನ ಸದಾಶಿವನಗರದಲ್ಲಿನ ರಮೇಶ್ ನಿವಾಸಕ್ಕೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ರಮೇಶ್ ಜಾರಕಿಹೊಳಿ ವಿರುದ್ಧ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಡಿ.ಕೆ.ಶಿವಕುಮಾರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.